ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ ಆದೇಶ ಪ್ರಶ್ನಿಸಿ ಸರಕಾರ ಮೇಲ್ಮನವಿ

Update: 2024-03-07 07:05 GMT

ಬೆಂಗಳೂರು, ಮಾ.7: ರಾಜ್ಯ ಪಠ್ಯ ಕ್ರಮವಿರುವ ಶಾಲೆಗಳ ಐದು, ಎಂಟು, ಒಂಭತ್ತು ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಕುರಿತಂತೆ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸಿದೆ.

ಇಂದು ನ್ಯಾಯಾಲಯದ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ.ಜೆ.ಶಿವಶಂಕರೇಗೌಡ ವಿಭಾಗೀಯ ಪೀಠದ ಮುಂದೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ್ ವಿಷಯ ಪ್ರಸ್ತಾಪಿಸಿದರು. ಅಲ್ಲದೆ, ಮಾರ್ಚ್ 11ರಿಂದ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಈ ಹಂತದಲ್ಲಿ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆ ಸುತ್ತೋಲೆ ರದ್ದುಪಡಿಸಿರುವ ಕಾರಣ ಪರೀಕ್ಷೆ ನಡೆಸಲು ಹಲವು ಸಮಸ್ಯೆ ಎದುರಾಗಲಿದೆ. ಆದ್ದರಿಂದ ತುರ್ತಾಗಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು. ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು. ಪರೀಕ್ಷಾ ವೇಳಾಪಟ್ಟಿ ಸಿದ್ದಗೊಂಡಿದೆ ಎಂದು ಪೀಠಕ್ಕೆ ಮನವಿ ಮಾಡಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಪೀಠ ಇರುವುದಿಲ್ಲ. ಹೀಗಾಗಿ ಮತ್ತೊಂದು ಪೀಠವನ್ನು ರಚನೆ ಮಾಡಿ ಇಂದೇ ವಿಚಾರಣೆಗೆ ವ್ಯವಸ್ಥೆ ಮಾಡುವುದಾಗಿ ಮುಖ್ಯ ನ್ಯಾಯಮೂರ್ತಿ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News