ಸಂಸ್ಕರಿಸಿದ ನೀರಿನ ಬಳಕೆಗೆ ಮಾರ್ಗಸೂಚಿ ರೂಪಿಸಿದ ಸರಕಾರ
ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿನ ನೀರಿನ ಸಮಸ್ಯೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಂಸ್ಕರಿಸಿದ ನೀರಿನ ಬಳಕೆಗೆ ಮಾರ್ಗಸೂಚಿಯನ್ನು ರೂಪಿಸಿದೆ.
ಈ ಕುರಿತು ಎ.3 ರಂದು ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಿದ ಸರಕಾರ, ವಸತಿ ಸಮುಚ್ಚಯಗಳು ಕನಿಷ್ಠ ಶೇ.50 ಸಂಸ್ಕರಿಸಿದ ನೀರನ್ನು ಬಳಕೆ ಮಾಡಬೇಕು. ಉಳಿದ ನೀರನ್ನು ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಬಹುದು. ಸಂಸ್ಕರಿಸಿದ ನೀರನ್ನು ನಿರ್ಮಾಣ, ಕೈಗಾರಿಕೆ, ತೋಟಗಾರಿಕೆ ಮತ್ತಿತರ ಉದ್ದೇಶಗಳಿಗೆ ಬಳಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.
ಆಹಾರ ಸಂಸ್ಕರಣಾ ಉದ್ದೇಶಗಳಿಗಾಗಿ ಸಂಸ್ಕರಿಸಿದ ನೀರು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ವಿಧಾನವು ಜಲಸಂಪನ್ಮೂಲಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ.
ಫೆಬ್ರವರಿಯಲ್ಲಿ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸ್ಕರಿಸಿದ ನೀರು ಬಳಕೆ ಕುರಿತು ಮಾತನಾಡಿ, ಈ ಕುರಿತು ಶೀಘ್ರದಲ್ಲೇ ಮಾರ್ಗಸೂಚಿ ರೂಪಿಸುವುದಾಗಿ ತಿಳಿಸಿದ್ದರು.