ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾ | ಮುಖ್ಯಮಂತ್ರಿಗಳೇ ರಾಜೀನಾಮೆ ಕೊಡಿ ಎಂದ ಬಿಜೆಪಿ

Update: 2024-09-24 08:30 GMT

ಸಿದ್ದರಾಮಯ್ಯ (PTI)

ಬೆಂಗಳೂರು : "ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ ಸಿದ್ದರಾಮಯ್ಯನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ. ರಾಜೀನಾಮೆ ನೀಡಿ, ತನಿಖೆ ಎದುರಿಸಿ" ಎಂದು ಬಿಜೆಪಿ ಒತ್ತಾಯಿಸಿದೆ.

ರಾಜ್ಯಪಾಲರ ಪ್ರಾಸಿಕ್ಯೂಷನ್‌ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಸಂಬಂಧ ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, "ಸಿದ್ದರಾಮಯ್ಯನವರೇ ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ. ಇನ್ನು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ" ಎಂದು ಆಗ್ರಹಿಸಿದೆ.

ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿರುವುದು ಸ್ವಾಗತಾರ್ಹ. ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್‌ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ ಎಂದು ಬಿಜೆಪಿ ತಿಳಿಸಿದೆ.

ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ʼಮೈಸೂರು ಚಲೋʼ ಹೋರಾಟಕ್ಕೆ ಜಯ ಸಿಕ್ಕಿದೆ :

ಮುಡಾದಲ್ಲಿ ಅಕ್ರಮವಾಗಿ 14 ಸೈಟುಗಳನ್ನು ಕಬಳಿಸಿದ್ದ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿರುವುದು ಸ್ವಾಗತಾರ್ಹ. ಅಧಿಕಾರ ದುರ್ಬಳಕೆ, ಸ್ವಜನಪಕ್ಷಪಾತ ಎಸಗಿ ಮುಡಾದಲ್ಲಿನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಸಿದ್ದರಾಮಯ್ಯನಡೆಸಿದ್ದ ಕುತಂತ್ರಗಳಿಗೆ ಹೈಕೋರ್ಟ್ ಆದೇಶ ಕಪಾಳಮೋಕ್ಷ ಮಾಡಿದೆ. ಮುಡಾ ಹಗರಣದ ವಿರುದ್ಧ ಎನ್‌ಡಿಎ ಮೈತ್ರಿ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷ ನಡೆಸಿದ್ದ "ಮೈಸೂರು ಚಲೋ" ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಜೆಡಿಎಸ್‌ ಟ್ವೀಟ್‌ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News