ಸಿಎಂ ಸಿದ್ದರಾಮಯ್ಯ ಸಹಿತ ನಾಲ್ವರು ಕಾಂಗ್ರೆಸ್ ನಾಯಕರಿಗೆ 10 ಸಾವಿರ ದಂಡ ವಿಧಿಸಿದ ಹೈಕೋರ್ಟ್

Update: 2024-02-06 07:56 GMT

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.‌ಪಾಟೀಲ್ ಮತ್ತು ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ  10 ಸಾವಿರ ದಂಡ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ‌

ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿ, ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್  ವಜಾಗೊಳಿಸಿ ಆದೇಶಿಸಿದೆ.

ಅಲ್ಲದೆ‌ ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರಾಗಲು ಸೂಚನೆ ನೀಡಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸದೆ. ಮಾರ್ಚ್ 7 ರಂದು ರಾಮಲಿಂಗಾರೆಡ್ಡಿ, ಮಾರ್ಚ್ 11 ರಂದು ರಣದೀಪ್ ಸುರ್ಜೇವಾಲಾ, ಮಾರ್ಚ್ 15 ರಂದು ಎಂ.ಬಿ.ಪಾಟೀಲ್ ಹಾಜರಾಗಲು ಸೂಚಿಸಿರುವ ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ಮತ್ತಿತರರಿಗೆ 10 ಸಾವಿರ ದಂಡ ವಿಧಿಸಿದೆ. ಅನಗತ್ಯವಾಗಿ ಪಿಎಸ್ಐ ಕು.ಜಹಿದಾ ಪ್ರತಿವಾದಿಯಾಗಿಸಿದ ಕಾರಣಕ್ಕಾಗಿ ದಂಡ ವಿಧಿಸಿದೆ. ಇದೇ ವೇಳೆ ಮೇಲ್ಮನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆ ನೀಡಲು  ಸಿದ್ದರಾಮಯ್ಯ ಪರ ವಕೀಲರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಜನಪ್ರತಿನಿಧಿಗಳು ಕಾನೂನು ಪಾಲಿಸಿದರೆ ಜನ ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಸಂಕಷ್ಟ.  ಪ್ರತಿಭಟನೆಗಳಿಂದ‌ ಜನರಿಗೆ ಮತ್ತಷ್ಟು ತ್ರಾಸ ಆಗುತ್ತೆ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಹೇಳಿದೆ.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.‌ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆ ನಡೆಸಿ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ ಪಡಿಸಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ನಗರದ ಹೈಗೌಂಡ್ರ್ಸ್ ಠಾಣಾ ಪೊಲೀಸರು ದಾಖಲಿಸಿದ ಪ್ರಕರಣ ಸಂಬಂಧ 42ನೇ ಎಸಿಎಂಎಂ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಜಾರಿ ಮಾಡಿದ್ದ ಎನ್ ಬಿ ಡಬ್ಲ್ಯೂ( ಜಾಮೀನು ರಹಿತ ಬಂಧನ ವಾರೆಂಟ್ )ಹಾಗೂ ವಿಶೇಷ ನ್ಯಾಯಾಲಯ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.‌ಪಾಟೀಲ್ ಮತ್ತು ಎಐಸಿಸಿ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಅರ್ಜಿ ಸಲ್ಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News