ಡಿಕೆಶಿ ವಿರುದ್ದದ ತನಿಖೆ ಹಿಂಪಡೆದ ವಿಚಾರ : ಸಿಬಿಐ, ಯತ್ನಾಳ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

Update: 2024-01-31 14:15 GMT

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಹಿಂದಿನ ಬಿಜೆಪಿ ಸರಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಕೇಂದ್ರ ತನಿಖಾ ದಳ(ಸಿಬಿಐ) ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತು.

ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ಡಿಸಿಎಂ ಡಿಕೆಶಿ ಪರ ವಿಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾಗಿದ್ದ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಅರ್ಜಿಗಳ ದಾಖಲೆಗಳು ಲಭ್ಯವಾಗಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಅಲ್ಲದೆ, ಡಿಕೆಶಿ ಅವರ ವಿರುದ್ಧದ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮೋದನೆಯನ್ನು ಹಿಂಪಡೆಯಲಾಗಿದೆ. ಪ್ರಕರಣವನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಿದ್ದರೂ, ಸಿಬಿಐ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡುತ್ತಿದೆ ಎಂದು ಪೀಠಕ್ಕೆ ವಿವರಿಸಿದರು.

ಇದಕ್ಕೆ ನ್ಯಾಯಪೀಠ, ಪ್ರಕರಣದ ಎಲ್ಲ ದಾಖಲೆಗಳನ್ನು ಪ್ರತಿವಾದಿ ವಕೀಲರಿಗೆ ಒದಗಿಸುವಂತೆ ಸೂಚನೆ ನೀಡಿತು. ಜತೆಗೆ, ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಮುಂದಿನ ವಿಚಾರಣೆ ವೇಳೆಗೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿತು.

ಇದೇ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಪರ ವಕೀಲರು, ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆದಿದ್ದು, ಲೋಕಾಯುಕ್ತರಿಗೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಲೋಕಾಯುಕ್ತರನ್ನು ಪ್ರತಿವಾದಿ ಮಾಡಬೇಕು ಎಂದು ಪೀಠಕ್ಕೆ ಕೋರಿದರು.

ಪ್ರಕರಣವೇನು?: 2021ರಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವು ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಅನುಮತಿಸಿತ್ತು. ಇದನ್ನು ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು. ಆನಂತರ ಇದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು.

ಈ ಮಧ್ಯೆ, ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದು, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು 2023ರ ನ.28ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿಕೆಶಿ ಅವರು ಮೇಲ್ಮನವಿ ಹಿಂಪಡೆದಿದ್ದರು. ಹೀಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು.

ಇದಕ್ಕೆ ಆಕ್ಷೇಪಿಸಿ ಬಿಜೆಪಿ ಶಾಸಕ ಯತ್ನಾಳ್ ಅವರು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದೀಗ ಸಿಬಿಐ ಸಹ ಹೈಕೋರ್ಟ್ ಮೆಟ್ಟಿಲೇರಿದೆ.

ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ತಿಳಿಸಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಇರಿಸಲಾಗಿತ್ತು. ಇದೀಗ ಅರ್ಜಿ ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News