ನುಡಿದಂತೆ ನಡೆಯುವುದೇ ‘ಕರ್ನಾಟಕ ಮಾದರಿ’: ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲಬುರಗಿ, ಆ.5: 'ಬಿಜೆಪಿಗೆ ಹಾಗೂ ಪ್ರಧಾನಿ ಮೋದಿಗೆ ತಾಕತ್ತಿದ್ದರೆ ನಾವು ಜಾರಿಗೊಳಿಸಿರುವಂತಹ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ರಾಜ್ಯ ಸರಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಜ್ಯೋತಿ’ ಯೋಜನೆಗೆ ಶನಿವಾರ ಕಲಬುರಗಿಯ ಎನ್.ವಿ.ಕಾಲೇಜು ಮೈದಾನದಲ್ಲಿ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.
''ಬಿಜೆಪಿಯವರು ಗುಜರಾತ್ ಮಾಡಲ್ ಎಂದು ದೇಶದ ಜನರಿಗೆ ಭ್ರಮೆ ಹುಟ್ಟಿಸಿದ್ದರು. ಆದರೆ, ನಮ್ಮ ರಾಜ್ಯವನ್ನು ಗುಜರಾತ್ ಮಾಡಲು ಬಿಡುವುದಿಲ್ಲ. ನಮ್ಮದೇ ಆದ ‘ಕರ್ನಾಟಕ ಮಾಡಲ್’ ಮಾಡಿದ್ದೇವೆ. ನುಡಿದಂತೆ ನಡೆಯುವುದೇ ಕರ್ನಾಟಕ ಮಾಡಲ್'' ಎಂದು ಹೇಳಿದರು.
ನಾವು ಅಧಿಕಾರಕ್ಕೆ ಬಂದು ಎರಡೂವರೆ ತಿಂಗಳಲ್ಲಿ ಭರವಸೆಗಳನ್ನು ಈಡೇರಿಸಿದ್ದೇವೆ. ಅದಕ್ಕೆ ಪೂರಕವಾಗಿ ಬಜೆಟ್‍ನಲ್ಲಿ ಅನುದಾನವನ್ನೂ ಘೋಷಿಸಿದ್ದೇವೆ. ಪ್ರಧಾನಿ ಮೋದಿ ಹೇಳಿರುವಂತೆ, ಯೋಜನೆಗಳನ್ನು ಜಾರಿ ತಂದು ನಾವು ದಿವಾಳಿ ಆಗುವುದಿಲ್ಲ. ಹಿಂದೆ ಬಿಜೆಪಿ ಆಡಳಿತವಿದ್ದಾಗ ರಾಜ್ಯ ದಿವಾಳಿ ಆಗಿ, ನಿರುದ್ಯೋಗ ಸಮಸ್ಯೆ ಹೆಚ್ಚಿತ್ತು ಎಂದು ಅವರು ದೂರಿದರು.
ನುಡಿದಂತೆ ನಡೆದಿದ್ದೇವೆ: ಗೃಹಜ್ಯೋತಿ ಯೋಜನೆಯಡಿ 2.14 ಕೋಟಿ ಜನ ಲಾಭ ಪಡೆಯಲಿದ್ದು, ಈಗಾಗಲೆ 1.41 ಕೋಟಿ ಜನರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಜುಲೈ ಒಂದರಿಂದ ಈ ಯೋಜನೆ ಪ್ರಾರಂಭವಾಗಿದೆ. ಆಗಸ್ಟ್ ತಿಂಗಳಿನಿಂದ ಗೃಹ ಬಳಕೆಯ ವಿದ್ಯುತ್‍ಗೆ ಶೂನ್ಯ ಬಿಲ್ಲು ಬರುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.
ಶಕ್ತಿ ಯೋಜನೆಯಿಂದ ಮಹಿಳೆಯರು ಸಂತುಷ್ಟ: ಜೂ.11ರಂದು ಜಾರಿಗೊಳಿಸಿದ ‘ಶಕ್ತಿ’ ಯೋಜನೆಯ ಲಾಭವನ್ನು ಇದುವರೆಗೂ 30 ಕೋಟಿಗೂ ಹೆಚ್ಚು ಜನ ಮಹಿಳೆಯರು ಪಡೆದಿದ್ದಾರೆ. ಪ್ರತಿದಿನ ಸುಮಾರು 50 ಲಕ್ಷ ಮಹಿಳೆಯರು ಉಚಿತವಾಗಿ ಸರಕಾರಿ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯಿಂದ ರಾಜ್ಯದ ಮಹಿಳೆಯರು ಸಂತುಷ್ಟರಾಗಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಗೆ ಆ.24 ರಂದು ಚಾಲನೆ ನೀಡಲಿದ್ದೇವೆ. ರಾಜ್ಯದ 1.28 ಕೋಟಿ ಕುಟುಂಬಗಳಿಗೆ 2 ಸಾವಿರ ರೂ.ಗಳನ್ನು ಈ ಯೋಜನೆಯಡಿ ನೀಡಲಾಗುವುದು. ನಾವು ಜನರ ಕೈಗೆ ದುಡ್ಡು ನೀಡುತ್ತಿದ್ದೇವೆ. ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ. ತನ್ಮೂಲಕ ರಾಜ್ಯದ ಜಿಡಿಪಿ, ಆರ್ಥಿಕ ಚಟುವಟಿಕೆ ಹೆಚ್ಚುತ್ತದೆ. ಐದು ಗ್ಯಾರಂಟಿಗಳಿಂದ ಒಂದು ಕುಟುಂಬಕ್ಕೆ ಪ್ರತಿ ತಿಂಗಳು 4 ರಿಂದ 5 ಸಾವಿರ ರೂ. ದೊರೆಯಲಿದ್ದು, ಈ ರೀತಿ ವಾರ್ಷಿಕವಾಗಿ 48 ರಿಂದ 60 ಸಾವಿರ ರೂ. ಲಭಿಸಲಿದೆ ಎಂದು ಅವರು ತಿಳಿಸಿದರು.
ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಭಾರತ್ ಜೋಡೋ ಯಾತ್ರೆ ವೇಳೆ ನಾಡಿನ ಜನರ ಸಂಕಷ್ಟ ಅರಿತು ಅವರಿಗೆ ಅನುಕೂಲವಾಗುವಂತೆ 5 ಗ್ಯಾರಂಟಿ ಕೊಟ್ಟೆವು. ಅಂದು ಕೊಟ್ಟ ಮಾತನ್ನು ನಾವು ಉಳಿಸಿಕೊಂಡಿದ್ದೇವೆ. ಜನರಿಗೆ ನಮ್ಮ ಮೇಲೆ ನಂಬಿಕೆ ಇದೆ. ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ನಮ್ಮ ಯೋಜನೆಗಳು ನೆಮ್ಮದಿ ತಂದಿವೆ ಎಂದು ಹೇಳಿದರು.
ಉಚಿತ ವಿದ್ಯುತ್ ಯೋಜನೆಯಿಂದ ಉಳಿತಾಯದ ಹಣವನ್ನು ಜನ ಶಿಕ್ಷಣ, ಆರೋಗ್ಯಕ್ಕೆ ಬಳಸುತ್ತಾರೆ. ಹೆಚ್ಚಿನ ಜನ ಶಿಕ್ಷಿತರಾಗಿ ನಿರುದ್ಯೋಗ ಸಮಸ್ಯೆಯೂ ನೀಗುತ್ತದೆ, ತೆರಿಗೆ ಕಟ್ಟುವವರ ಸಂಖ್ಯೆಯೂ ಹೆಚ್ಚುತ್ತದೆ. ಇದೆಲ್ಲದರ ಮೂಲಕ ಸಾಮಾಜಿಕ ಆರ್ಥಿಕ ಪ್ರಗತಿಯಾಗಿ, ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗುವುದು ಎಂದು ಅವರು ತಿಳಿಸಿದರು.
1.42 ಕೋಟಿ ಫಲಾನುಭವಿಗಳು: ಜು.25ರವರೆಗೆ 5 ಎಸ್ಕಾಂಗಳ ಒಟ್ಟು 1.42 ಕೋಟಿ ಫಲಾನುಭವಿಗಳು ಯೋಜನೆಗೆ ನೋಂದಣಿಯಾಗಿದ್ದಾರೆ. ಈ ಪೈಕಿ ಸುಮಾರು 18 ಲಕ್ಷ ಮಂದಿ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಮತ್ತು ಅಮೃತ್ ಜ್ಯೋತಿಯಂತಹ ಹಾಲಿ ಯೋಜನೆಗಳ ಫಲಾನುಭವಿಗಳು ಸೇರಿದ್ದಾರೆ. ಆ.1ರಿಂದ ಇಂಧನ ಇಲಾಖೆಯು ಸರಿಸುಮಾರು 24 ಲಕ್ಷ ವಿದ್ಯುತ್ ಬಿಲ್‍ಗಳನ್ನು ವಿತರಿಸಿದ್ದು, ಅದರಲ್ಲಿ 14.5 ಲಕ್ಷ ಒಟ್ಟು ಶೂನ್ಯ ಬಿಲ್‍ಗಳು. ಉಳಿದ ಗ್ರಾಹಕರು ತಮ್ಮ ಮಾಸಿಕ ವಿದ್ಯುತ್ ಬಿಲ್‍ಗಳಿಗೆ ಅಲ್ಪ ಮೊತ್ತವನ್ನು ಪಾವತಿಸುವ ಮೂಲಕ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಜಾರ್ಜ್ ಮಾಹಿತಿ ನೀಡಿದರು.
ಜು.27ರ ಮೊದಲು ಅರ್ಜಿ ಸಲ್ಲಿಸಿದವರು ಮಾತ್ರ ಜುಲೈ ತಿಂಗಳ ವಿದ್ಯುತ್ ಬಳಕೆಯ ಶುಲ್ಕದಲ್ಲಿ ಲಾಭ ಪಡೆಯಲು ಅರ್ಹರಾಗಿರುತ್ತಾರೆ. ಜು.27ರ ನಂತರ ಅರ್ಜಿ ಸಲ್ಲಿಸಿದವರು ಆಗಸ್ಟ್‍ನಲ್ಲಿ ಅವರ ಬಳಕೆಯ ಆಧಾರದ ಮೇಲೆ ಸೆಪ್ಟೆಂಬರ್‍ನ ಬಿಲ್ಲಿಂಗ್‍ನಲ್ಲಿ ಪ್ರಯೋಜನ ಪಡೆಯುತ್ತಾರೆ. ಯೋಜನೆಗೆ ನೋಂದಾಯಿಸಿಕೊಳ್ಳಲು ಯಾವುದೇ ಅಂತಿಮ ದಿನಾಂಕ ಘೋಷಿಸಿಲ್ಲ ಎಂದು ಅವರು ತಿಳಿಸಿದರು.
ಸರಾಸರಿ ಬಳಸುವ ಯೂನಿಟ್ ವಿದ್ಯುತ್ 200 ಯೂನಿಟ್‍ಗಳಿಗಿಂತ ಕಡಿಮೆಯಿದ್ದರೆ, ಮನೆಯ ಗ್ರಾಹಕರು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಸರಾಸರಿಗಿಂತ ಹೆಚ್ಚಿನ ಯೂನಿಟ್ ಬಳಸಿದರೆ, ಹೆಚ್ಚುವರಿ ಯೂನಿಟ್‍ಗೆ ಮಾತ್ರ ಶುಲ್ಕ ಪಾವತಿಸಬೇಕಾಗುತ್ತದೆ. ಆದರೆ, 200ಕ್ಕೂ ಹೆಚ್ಚು ಯೂನಿಟ್ ಬಳಸಿದರೆ ಪೂರ್ಣ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಜಾರ್ಜ್ ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಶರಣಬಸಪ್ಪ ದರ್ಶನಾಪುರ, ರಹೀಂಖಾನ್, ಶಾಸಕಿ ಕನೀಝ್ ಫಾತಿಮಾ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ರಾಜ್ಯ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.