‘ಭಾಗ್ಯಲಕ್ಷ್ಮಿ’ ಸ್ಥಗಿತಗೊಳಿಸುವ ಪ್ರಸ್ತಾವ ಸರಕಾರದ ಮುಂದಿಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Update: 2024-02-23 15:21 GMT

ಬೆಂಗಳೂರು : ಹೆಣ್ಣು ಮಕ್ಕಳ ಭವಿಷ್ಯಕ್ಕೆ ಭರವಸೆಯಾದ ‘ಭಾಗ್ಯಲಕ್ಷ್ಮಿ ಯೋಜನೆ' ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆ ಬಿಜೆಪಿಯ ಎನ್.ರವಿಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಗುವಿಗೆ ಆರ್ಥಿಕ ನೆರವಿನ ಮೂಲಕ ಸಬಲೀಕರಣಗೊಳಿಸಿ ಸ್ವಾವಲಂಬಿಯಾಗಿ ಮಾಡುವ ಯೋಜನೆ ಇದಾಗಿದೆ. 2006ನೆ ಸಾಲಿನಿಂದ ಈ ಯೋಜನೆ ಅನುಷ್ಠಾನದಲ್ಲಿದೆ ಎಂದು ಹೇಳಿದರು.

ಭಾಗ್ಯಲಕ್ಷ್ಮಿ ಯೋಜನೆಯಡಿ ಈ ಮೊದಲು ಹೆಣ್ಣು ಮಗುವಿನ ಹೆಸರಿನಲ್ಲಿ ಬಾಂಡ್ ನೀಡಲಾಗುತ್ತಿತ್ತು. ಆದರೆ, ಈಗ ಮಗುವಿನ ಹೆಸರಿನಲ್ಲಿ ವಾರ್ಷಿಕ 3 ಸಾವಿರ ರೂ.ನಂತೆ 15 ವರ್ಷಗಳ ವರೆಗೆ ಒಟ್ಟು 45 ಸಾವಿರ ರೂ.ಗಳನ್ನು ಅಂಚೆ ಇಲಾಖೆಯ ‘ಸುಕನ್ಯಾ ಸಮೃದ್ಧಿ’ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ ಎಂದು ಅವರು ತಿಳಿಸಿದರು.

ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಅಂದಾಜು ಪರಿಪಕ್ವ ಮೊತ್ತವನ್ನು ನೀಡಲಾಗುವುದು. ಅಷ್ಟೇ ಅಲ್ಲ, 18 ವರ್ಷ ಪೂರ್ಣಗೊಂಡ ನಂತರ ಉನ್ನತ ವಿದ್ಯಾಭ್ಯಾಸಕ್ಕಾಗಿ ಖಾತೆಯಲ್ಲಿರುವ ಮೊತ್ತದ ಶೇ.50ರಷ್ಟು ಭಾಗವನ್ನು ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದರು.

2006 ರಿಂದ ಇಲ್ಲಿಯವರೆಗೆ 23,22,267 ಅರ್ಜಿಗಳು ಸುಕನ್ಯಾ ಸಮೃದ್ಧಿ- ಭಾಗ್ಯಲಕ್ಷ್ಮೀ ಯೋಜನೆಯಡಿ ಸ್ವೀಕೃತಗೊಂಡಿವೆ. 9 ತಿಂಗಳಲ್ಲಿ 1,12,000 ಅರ್ಜಿಗಳನ್ನು ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲಾಗಿದೆ. ಈವರೆಗೆ ಸಲ್ಲಿಕೆಯಾದ ಅರ್ಜಿಗಳನ್ನು ಸ್ವೀಕೃತಗೊಂಡಿವೆ. ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಈ ಬಗ್ಗೆ ಪೋಷಕರಲ್ಲಿ ಯಾವುದೇ ಆತಂಕಬೇಡ, ಬಾಂಡ್ ಬಂದಿಲ್ಲವೆಂಬ ಚಿಂತೆಯೂ ಬೇಡ. ಆನ್‍ಲೈನ್ ಮೂಲಕ ಸಲ್ಲಿಕೆಯಾದ ಎಲ್ಲ ಅರ್ಜಿಗಳು ಸ್ವೀಕೃತವಾಗಿವೆ ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News