ರಾಜ್ಯ ಸರಕಾರ ಚುನಾವಣೆಯ ಹೊಂದಾಣಿಕೆಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ : ಆರ್‌.ಅಶೋಕ್

Update: 2024-03-10 10:17 GMT

ಬೆಂಗಳೂರು: "ರಾಜ್ಯದ ಕಾಂಗ್ರೆಸ್‌ ಸರಕಾರ ಚುನಾವಣೆಯ ಹೊಂದಾಣಿಕೆಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಈ ಸರಕಾರದ ಬಳಿ ಬರ ಪರಿಹಾರ ನೀಡಲು ಹಣವಿಲ್ಲ. ಆದರೆ ನೀರನ್ನು ಮಾತ್ರ ನೀಡುತ್ತಿದ್ದಾರೆ" ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯ ಕಾಂಗ್ರೆಸ್‌ ಸರಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಹರಿಸಿದೆ. ರೈತರು ಹೋರಾಟ ಮಾಡುತ್ತಿದ್ದಾರೆ. ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ, ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ. ಇಷ್ಟಾದರೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಾರೆ ಎಂದರೆ ಇಂತಹ ನಾಚಿಕೆಗೆಟ್ಟ ಸರಕಾರ ಇತಿಹಾಸದಲ್ಲೇ ಇಲ್ಲ ಎನ್ನಬೇಕು. ನಮ್ಮ ಕುಡಿಯುವ ನೀರನ್ನು ಚುನಾವಣಾ ಹೊಂದಾಣಿಕೆಗಾಗಿ ಬಿಟ್ಟುಕೊಡುತ್ತಾರೆ. ಈಗಾಗಲೇ ಓಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಈಗ ಹೊಂದಾಣಿಕೆಗಾಗಿ ರಾಜ್ಯಕ್ಕೆ ಕಾಂಗ್ರೆಸ್‌ ದ್ರೋಹ ಬಗೆಯುತ್ತಿದೆ" ಎಂದು ಹೇಳಿದರು.

"ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆಂದು ಹೋರಾಟ ಮಾಡಿ, ಈಗ ಕೇಂದ್ರ ಸರಕಾರ ಮಾಡಬೇಕು ಎನ್ನುತ್ತಿದ್ದಾರೆ. ಆಯವ್ಯಯದಲ್ಲಿ ಮೇಕೆದಾಟು ಯೋಜನೆಗೆ ನಯಾ ಪೈಸೆ ನೀಡಿಲ್ಲ. ಇವರಿಗೆ ಮಾನವಿದ್ದರೆ 10 ಸಾವಿರ ಕೋಟಿ ರೂಪಾಯಿಯನ್ನು ಈ ಯೋಜನೆಗೆ ಮೀಸಲಿಡಬೇಕಿತ್ತು. ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಮಾನವನ್ನು ತೆಗೆದಿದ್ದು, ಜನರಿಗೆ ಕಲುಷಿತ ನೀರು ನೀಡಲಾಗುತ್ತಿದೆ. ಖಜಾನೆಯನ್ನು ಲೂಟಿ ಹೊಡೆಯುವುದರಲ್ಲಿ ಎಲ್ಲರೂ ನಿರತರಾಗಿದ್ದಾರೆ" ಎಂದರು.

"ಬರ ಪರಿಹಾರಕ್ಕೆ ಚುನಾವಣಾ ನೀತಿ ಸಂಹಿತೆ ಅನ್ವಯವಾಗುವುದಿಲ್ಲ. ಎಸ್‌ಡಿಆರ್‌ಎಫ್‌ ಹಣ ಈಗಾಗಲೇ ರಾಜ್ಯ ಸರಕಾರಕ್ಕೆ ತಲುಪಿದೆ. ಎನ್‌ಡಿಆರ್‌ಎಫ್‌ ಹಣವನ್ನು ಕೇಂದ್ರ ಸರಕಾರ ಒಟ್ಟಿಗೆ ತೀರ್ಮಾನ ಮಾಡಿ ಎಲ್ಲ ರಾಜ್ಯಗಳಿಗೆ ನೀಡುತ್ತದೆ. ಬಿಜೆಪಿ ಸರಕಾರ ತಕ್ಷಣ ಪ್ರವಾಹ ಹಾನಿ ಪರಿಹಾರ ನೀಡಿದ್ದು, ಬಳಿಕ ಕೇಂದ್ರ ಸರಕಾರ ಹಣ ನೀಡಿತ್ತು. ಮನಮೋಹನ್‌ ಸಿಂಗ್‌ ಸರಕಾರವಿದ್ದಾಗ ಇದೇ ರೀತಿ ತಡವಾಗಿ ಪರಿಹಾರ ನೀಡಲಾಗಿತ್ತು. ಆಗ ಬಾಯಿ ಬಡಿದುಕೊಳ್ಳದ ಕಾಂಗ್ರೆಸ್‌, ಈಗ ಮಾತ್ರ ಬಾಯಿ ಬಡಿಯುತ್ತಿದೆ. ಕೇಂದ್ರದೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳದೆ ರಾಜಕೀಯ ಮಾಡುತ್ತಿದ್ದಾರೆ. ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿಯವರು ಪ್ರಧಾನಿಯ ಬಗ್ಗೆ ಉತ್ತಮವಾಗಿ ಮಾತನಾಡಿದ್ದಾರೆ. ಕರ್ನಾಟಕದ ಕಾಂಗ್ರೆಸ್‌ ನಾಯಕರು ಅವರ ಬಳಿ ಟ್ಯೂಶನ್‌ ಪಡೆಯಲಿ" ಎಂದರು.

"ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಟಿಕೆಟ್‌ ಕೊಟ್ಟರೂ ಬಿಜೆಪಿ ಕಾರ್ಯಕರ್ತರು ಭಿನ್ನಾಭಿಪ್ರಾಯವಿಲ್ಲದೆ ನಿಷ್ಠೆಯಿಂದ ಕೆಲಸ ಮಾಡುವ ಮನೋಭಾವ ಹೊಂದಿದ್ದಾರೆ. ಪಕ್ಷ ಅಂತಿಮವಾಗಿ ಸೂಚಿಸುವ ಅಭ್ಯರ್ಥಿಗಳ ಪರವಾಗಿ ಎಲ್ಲರೂ ಕೆಲಸ ಮಾಡಲಿದ್ದಾರೆ. ಒಂದು ಬಾರಿ ಟಿಕೆಟ್‌ ಘೋಷಣೆಯಾದ ಬಳಿಕ ಎಲ್ಲರೂ ಒಂದಾಗಿ ಕೆಲಸ ಮಾಡಲಿದ್ದಾರೆ" ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News