ಸರಕಾರಿ ನೌಕರರ ವರ್ಗಾವಣೆ ಅವಧಿ ಮತ್ತೆ ವಿಸ್ತರಣೆ

Update: 2023-06-30 19:01 GMT

ಬೆಂಗಳೂರು, ಜೂ.30: ರಾಜ್ಯ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜುಲೈ 3ರ ವರೆಗೆ ವಿಸ್ತರಿಸಿ ಮೂರನೆ ಬಾರಿಗೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಮೊದಲು 2023-24ನೆ ಸಾಲಿನ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಜೂನ್ 15ರ ವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು. ಬಳಿಕ ಜೂನ್ 30ರ ವರೆಗೆ ಸಾರ್ವತ್ರಿಕ ವರ್ಗಾವಣೆ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸುವುದು ಅವಶ್ಯವೆಂದು ಪರಿಗಣಿಸಿ ಸರಕಾರ ಈಗ ಮೂರನೇ ಬಾರಿಗೆ ವಿಸ್ತರಣೆಯ ಆದೇಶ ಹೊರಡಿಸಿದೆ.

2023-24ನೆ ಸಾಲಿಗೆ ಗ್ರೂಪ್ ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ವರ್ಗಾವಣೆ ಮಾರ್ಗಸೂಚಿ ಹೊರಡಿಸಲಾಗಿತ್ತು. ಸರಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ತೃತವಾದ ಮಾರ್ಗಸೂಚಿಗಳನ್ನು ನೀಡಲಾಗಿದೆ.

ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ.

ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ ಎಂದು ಆದೇಶ ಪ್ರತಿಯಲ್ಲಿ ಸೂಚಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News