ಬೆಳಗಾವಿಯಲ್ಲೊಂದು ಅಮಾನವೀಯ ಕೃತ್ಯ: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

Update: 2023-12-11 09:33 GMT

ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಂತ್ರಸ್ತೆಯ ಆರೋಗ್ಯ ವಿಚಾರಿಸಿದರು.

ಬೆಳಗಾವಿ, ಡಿ.11: ಪ್ರೀತಿಸಿದ ಯುವತಿಯನ್ನು ಕರೆದುಕೊಂಡು ಯುವಕ ಓಡಿ ಹೋಗಿದ್ದರಿಂದ ಆಕ್ರೋಶಗೊಂಡ ಯುವತಿಯ ಸಂಬಂಧಿಕರು ಯುವಕನ ಮನೆಯನ್ನು ಧ್ವಂಸಗೊಳಿಸಿ, ಆತನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ನಡೆದಿರುವುದು ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ: ವಂಟಮೂರಿ ಗ್ರಾಮದ ದುಂಡಪ್ಪ ಮತ್ತು ಪ್ರಿಯಾಂಕಾ ಎಂಬವರು ಪ್ರೇಮಿಗಳಾಗಿದ್ದರು. ಈ ನಡುವೆ ಪ್ರಿಯಾಂಕಾರಿಗೆ ಬೇರೊಬ್ಬನ ಜೊತೆ ವಿವಾಹ ನಿಶ್ಚಯವಾಗಿತ್ತು. ಈ ವಿಚಾರ ತಿಳಿದ ದುಂಡಪ್ಪ ರವಿವಾರ ರಾತ್ರಿ 12:30ರ ಸುಮಾರಿಗೆ ಪ್ರಿಯಾಂಕಾಳನ್ನು ಕರೆದುಕೊಂಡು ಓಡಿ ಹೋಗಿದ್ದಾನೆ. ಇದರಿಂದ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು ಸೋಮವಾರ ಮುಂಜಾವ 3:30ರ ಸುಮಾರಿಗೆ ವೇಳೆ ದುಂಡಪ್ಪರ ಮನೆಗೆ ನುಗ್ಗಿ ಮಲಗಿದ್ದ ಅವರ ತಾಯಿ ಕಮಲವ್ವರಿಗೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅವರನ್ನು ಮನೆಯಿಂದ ಹೊರಗೆಳೆದು ಬೆತ್ತಲೆಗೊಳಿಸಿ ಕಂಬವೊಂದಕ್ಕೆ ಕಟ್ಟಿ ಹಲ್ಲೆಗೈದು ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ದೂರಲಾಗಿದೆ. ದುಷ್ಕರ್ಮಿಗಳು ಕಮಲ್ವರ ಮನೆಯನ್ನೂ ಧ್ವಂಸಗೊಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಕಾಕತಿ ಪೊಲೀಸ್ ಠಾಣೆಯಲ್ಲಿ ಮಹಿಳೆಯರು ಸೇರಿ ಒಂಭತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈಗಾಗಲೇ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘಟನಾ ಸ್ಥಳಕ್ಕೆ ಗೃಹ ಸಚಿವ ಭೇಟಿ

ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಕೃತ್ಯದ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಹಿಳೆಯೊಬ್ಬರ ಹಲ್ಲೆ ನಡೆಸಿದ್ದಲ್ಲದೆ ಅವರನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಸಂತ್ರಸ್ಥೆಯ ಮನೆಯನ್ನೂ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಈ ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇದೊಂದು ಅಮಾನವೀಯ ಕೃತ್ಯ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಏಳು ಮಂದಿಯನ್ನು ಬಂಧಿಸಲಾಗಿದೆ. ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದರು.

ಪ್ರಕರಣದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅದೇರೀತಿ ಓಡಿ ಹೋಗಿರುವ ಯುವಕ-ಯುವತಿಯನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಬೆಳಗಾವಿ ನಗರ ಪೊಲೀಸ್ ಕಮಿಷನರ್ ಸಿದ್ದರಾಮಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಮಿಷನರ್, ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಏಳು ಮಂದಿಯನ್ನು ಬಂಧಿಸಲಾಗಿದೆ. ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಲ್ಲೆಗೊಳಗಾದ ಮಹಿಳೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಒಂದು ಕೆಎಸ್ ಆರ್ ಪಿ ತುಕುಡಿ, ಒಬ್ಬ ಎಸಿಪಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News