ರಾಜ್ಯದಲ್ಲಿ ಮುಂದಿನ ಐದು ದಿನ ಹೆಚ್ಚು ಮಳೆಯಾಗುವ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಮುಂದಿನ ಐದು ದಿನ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಶನಿವಾರ ಮಾಹಿತಿ ನೀಡಿದೆ.
ಮೇಲ್ಮೈ ಸುಳಿಗಾಳಿ, ಟ್ರಫ್ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮೋಡ ಕವಿದ ವಾತಾವರಣವಿದೆ. ಮೇ 18ದಿಂದ ಮೇ 22ರ ವರೆಗೂ ಮಲೆನಾಡು ಭಾಗದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದೆ.
ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ದಕ್ಷಿಣ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಾಧಾರಣ ಅಥವಾ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.