ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

Update: 2024-09-11 10:57 GMT

ಬೆಂಗಳೂರು : "ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ, ಈ ಬದಲಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ" ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಅವರು ಬುಧವಾರ  ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಚಿವ ಸಂಪುಟ ಉಪಸಮಿತಿ ರಚನೆ :

ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿನ ಹಗರಣಗಳ ಕುರಿತ ತನಿಖೆಗಳ ಪ್ರಗತಿ ಹಾಗೂ ಸಮನ್ವಯ ಸಂಬಂಧ ಕ್ರಮ ವಹಿಸುವ ನಿಟ್ಟಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ. ಸಮಿತಿಯು ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್ ಐ ಹಗರಣ, ಶೇ.40 ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್ 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಪ್ಪಿತಸ್ಥರ ವಿರುದ್ಧ ಕ್ರಮ :

ಸರಕಾರ ತನಿಖೆಗೆ ಸೂಚಿಸುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, "ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು" ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News