ಪಂಚ ʼಗ್ಯಾರಂಟಿʼ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ : ಸಿಎಂ ಸಿದ್ದರಾಮಯ್ಯ

Update: 2024-05-20 10:08 GMT
Screengrab : FB/Siddaramaiah

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳು ಲೋಕಸಭೆ ಚುನಾವಣೆ ಫಲಿತಾಂಶ ಬಳಿಕವೂ ಮುಂದುವರೆಯಲಿದ್ದು, ಈಗಾಗಲೇ ಇದಕ್ಕೆ ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆ ನಗರದಲ್ಲಿಂದು ಬೆಂಗಳೂರು ಪ್ರೆಸ್ ಕ್ಲಬ್ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಬಂದು ಇಂದಿಗೆ ಒಂದು ವರ್ಷ ತುಂಬಿದ್ದು, ಲೋಕಸಭಾ ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಸಂಭ್ರಮ ಆಚರಣೆ ಮಾಡಲು ಆಗಿಲ್ಲ. ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ ಎಂದು ನುಡಿದರು.

ಈ ಒಂದು ವರ್ಷದಲ್ಲಿ ಸರ್ಕಾರ 'ಶಕ್ತಿ, ಅನ್ನ ಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಮತ್ತು ಯುವ ನಿಧಿ' ಎಂಬ ಐದು ಗ್ಯಾರೆಂಟಿಗಳನ್ನು ಸಾಕಾರಗೊಳಿಸಲಾಗಿದೆ. ಸದರಿ ಲೋಕಸಭೆ ಚುನಾವಣೆಯ ನಂತರ ಸ್ಥಗಿತಗೊಳಿಸಲಾಗುತ್ತದೆ. ಚುನಾವಣೆ ಮುಗಿದ ಬಳಿಕ ಉಚಿತ ಯೋಜನೆ ಬಂದ್ ಎಂಬ ಆರೋಪಗಳಿವೆ. ಆದರೆ ಇದೆಲ್ಲ ಬಿಜೆಪಿ ಊಹೆಗಳಾಗಿದ್ದು, ಒಪ್ಪಲು ಸಾಧ್ಯವಿಲ್ಲ. ಲೋಸಕಭಾ ಚುನಾವಣೆ ನಂತರವು ಕಾಂಗ್ರೆಸ್‌ ನ 5 ಗ್ಯಾರೆಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಮುಂದುವರಿಯುತ್ತವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಅಧಿಕಾರ ಬಂದ ಕೂಡಲೇ ಒಂದು ಕ್ಷಣವನ್ನು ಹಾಳು ಮಾಡದೇ ಒಂಬತ್ತು ತಿಂಗಳೊಳಗೆ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ಅನ್ನಭಾಗ್ಯ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದರೂ ಸಹಿತ ಫಲಾನುಭವಿಗಳಿಗೆ ಮೋಸ ಮಾಡದೇ ಐದು ಕೆಜಿ ಅಕ್ಕಿ ಬದಲಾಗಿ ಅದಕ್ಕೆ ಸಮಾನ ಹಣ ನೀಡಿದ್ದೇವೆ. ಈ ವರ್ಷ ರಾಜ್ಯಕ್ಕೆ ಬರಗಾಲ ಉಂಟಾದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯ ನಿರ್ವಹಿಸಿದ್ದೇವೆ. ಬರೋಬ್ಬರಿ 223 ತಾಲೂಕುಗಳು ಬರಗಾಲ ಪೀಡಿತವಾಗಿದ್ದವು. ಅವುಗಳಿಗೆ ವಿಪತ್ತು ಪರಿಹಾರದ ಅಡಿ ಕೇಂದ್ರದಿಂದ ಹಣ ಬರಲಿಲ್ಲ. ಆದರೆ ನಾವು ಜನರಿಗೆ ಭದ್ರತೆ ಒದಗಿಸಿದ್ದೇವೆ. ಅನೇಕ ಬರ ಪೀಡಿತ ರೈತರ ಖಾತೆಗಳಿಗೆ ಡಿಬಿಟಿ ಮೂಲಕ ಹಣ ವಿತರಿಸಿದ್ದೇವೆ. ಬರ ಸಂಕಷ್ಟ ತಪ್ಪಿಸಲು ಸರ್ಕಾರ ಜನರೊಂದಿಗೆ ಕೈಜೋಡಿದೆ. ಈ ಮೂಲಕ ಕಾಂಗ್ರೆಸ್ ಜನಪರ ಸರ್ಕಾರ ಎಂಬುದನ್ನು ಸಾಬೀತು ಮಾಡಿದೆ ಎಂದು ಅವರು ನುಡಿದರು.

ಒಟ್ಟಿನಲ್ಲಿ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ. ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ ಎಂದು ಅವರು ವಿಶ್ಲೇಷಣೆ ಮಾಡಿದರು.

ಯಾವುದೇ ಕಾರಣಕ್ಕೂ ಸಚಿವ ಸಂಪುಟ ಪುನರ್ ರಚನೆ ಆಗಲ್ಲ

ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬರಲಿ. ಯಾವುದೇ ಕಾರಣಕ್ಕೂ ಸಚಿವ ಸಂಪುಟ ಪುನರ್ ರಚನೆ ಆಗಲ್ಲ.ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೂ 15ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾನು ಬಿಜೆಪಿ‌ ಹಾಗೂ ಬಿ.ಎಸ್.ಯಡಿಯೂರಪ್ಪ ಅವರಂತೆ 28ಕ್ಕೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಲ್ಲ.ನನಗೆ ಗೊತ್ತಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು 15ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ನುಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News