9 ಐಎಎಸ್ ಅಧಿಕಾರಿಗಳ ವರ್ಗಾವಣೆ; ವಿಜಯಪುರ ಜಿಲ್ಲಾಧಿಕಾರಿಯಾಗಿ ಟಿ.ಭೂಬಾಲನ್ ನೇಮಕ
ಬೆಂಗಳೂರು, ಜು.10: ರಾಜ್ಯ ಸರಕಾರವು ಒಂಭತ್ತು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಆಯುಷ್ ಇಲಾಖೆಯ ಆಯುಕ್ತ ಜೆ.ಮಂಜುನಾಥ್ ಅವರನ್ನು ಸರ್ವೆ ಸೆಟಲ್ಮೆಂಟ್ ಹಾಗೂ ಭೂ ದಾಖಲೆಗಳ ಆಯುಕ್ತರಾಗಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ನಿರ್ದೇಶಕಿ ಸಿ.ಸತ್ಯಭಾಮಾ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತೆ ಸಿ.ಟಿ.ಶಿಲ್ಪಾ ನಾಗ್ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ, ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯಾಗಿ, ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಎಚ್.ವಿ.ದರ್ಶನ್ ಅವರನ್ನು ಐಟಿ ಮತ್ತು ಬಿಟಿ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ಕೆ.ಎನ್.ಅನುರಾಧಾ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾ ಬಸವಂತಪ್ಪ ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಂ.ಗ್ರಾ. ಜಿಲ್ಲಾ ಪಂಚಾಯಿತಿ ಸಿಇಒ ವರ್ನಿತ್ ನೇಗಿ ಅವರನ್ನು ಕೊಡಗು ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ನೋಂಗ್‍ಜೈ ಮುಹಮ್ಮದ್ ಅಲಿ ಅಕ್ರಮ್ ಶಾ ಅವರನ್ನು ಹೊಸಪೇಟೆ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.