ಸಾಹಿತಿ ಡಾ.ಎಂ.ಎಂ. ಕಲಬುರ್ಗಿ ಹೆಸರಿನಲ್ಲಿ ಟ್ರಸ್ಟ್ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-07-07 12:39 GMT

ಬೆಂಗಳೂರು, ಜು.7: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ಖ್ಯಾತ ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಅವರ ಹೆಸರಿನಲ್ಲಿ ಒಂದು ಟ್ರಸ್ಟ್ ಅನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಅವರು, ‘ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರತಿಷ್ಠಾನದ ಮೂಲಕ ಅವರ ಸಾಹಿತ್ಯ ಹಾಗೂ ಪರಿಸರ ಸಂರಕ್ಷಣೆಯ ಚಿಂತನೆಗಳನ್ನು ಯುವಜನಾಂಗಕ್ಕೆ ಪರಿಚಯಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು 2 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ರಾಜ್ಯದ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಲು ಮತ್ತು ಯುವ ಪೀಳಿಗೆಗೆ ಪರಿಚಯಿಸಲು ಪ್ರಮುಖ ಪಾತ್ರವಹಿಸುತ್ತಿರುವ ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ 2 ಕೋಟಿ ರೂ. ಅನುದಾನ ನೀಡಲಾಗುವುದು. ಇದೇ ಮಾದರಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಜಿಲ್ಲೆಯಲ್ಲಿ ಜಾನಪದ ಲೋಕ ಸ್ಥಾಪನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಬಂಜಾರ ಸಮುದಾಯದ ಸಾಂಸ್ಕೃತಿಕ ಮತ್ತು ಜಾನಪದ ನೃತ್ಯ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ರಾಜ್ಯದ ಬುಡಕಟ್ಟು ಸಮುದಾಯದ ಸಂಸ್ಕೃತಿ, ಜಾನಪದ ವೈದ್ಯ ಪದ್ಧತಿ, ಜಾನಪದ ಕಲೆಗಳ ಪ್ರದರ್ಶನ, ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದಕ್ಕೆ ಉತ್ತೇಜನ ನೀಡಲು ಬುಡಕಟ್ಟು ಜನಾಂಗದ ಕಲಾವಿದರ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.



 


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News