ಶೇ.80ರಷ್ಟು ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ: ಸಚಿವ ಮಧು ಬಂಗಾರಪ್ಪ

Update: 2023-07-10 14:50 GMT

ಬೆಂಗಳೂರು, ಜು.10: ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿಗೆ ಈಗಾಗಲೇ 125 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ರಾಜ್ಯಾದ್ಯಂತ ಎಲ್ಲ ಸರಕಾರಿ ಶಾಲಾ ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲಿ ಶೇ.83ರಷ್ಟು ಮಕ್ಕಳಿಗೆ ಉಚಿತ ಸಮವಸ್ತ್ರ, ಶೂ ಮತ್ತು ಸಾಕ್ಸ್ ಗಳನ್ನು ವಿತರಿಸಲಾಗಿದೆ ಎಂದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸೋಮವಾರ ವಿಧಾನ ಪರಿಷತ್ತಿನಲ್ಲಿ ಮಂಜುನಾಥ್ ಭಂಡಾರಿ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇನ್ನುಳಿದ ಶೇ.17ರಷ್ಟು ಸಮವಸ್ತ್ರ ಮತ್ತು ಶೂ, ಸಾಕ್ಸ್‍ಗಳನ್ನು ಈ ತಿಂಗಳಾಂತ್ಯದೊಳಗೆ ಪೂರೈಕೆ ಮಾಡಲಾಗುವುದು. ವಿದ್ಯಾ ವಿಕಾಸ ಯೋಜನೆಯಡಿ 1 ರಿಂದ 10ನೆ ತರಗತಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮುದ್ರಿಸಿ ಶಾಲೆಗಳಿಗೆ ಸರಬರಾಜು ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿರುವ 13 ಸಾವಿರ ಶಿಕ್ಷಕರ ಜತೆಗೆ ಸಂಗೀತ, ಚಿತ್ರಕಲೆ ಸೇರಿದಂತೆ ವಿಶೇಷ ಶಿಕ್ಷಕರ ನೇಮಕಕ್ಕೂ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು.

ರಾಜ್ಯದ ಸರಕಾರಿ ಪ್ರೌಢಶಾಲೆಯಲ್ಲಿ 6ಕ್ಕಿಂತ ಹೆಚ್ಚು ವಿಭಾಗವರುವ ಶಾಲೆಗಳಿಗೆ ವಿಶೇಷ ಶಿಕ್ಷಕರ ಹುದ್ದೆಯನ್ನು ಮಂಜೂರು ಮಾಡಲಾಗಿದೆ. ಅದರಂತೆ ರಾಜ್ಯದಲ್ಲಿ 2,328 ಹುದ್ದೆಗಳು ಮಂಜೂರಾಗಿದ್ದು, 1,253 ಮಂದಿ ವಿಶೇಷ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನೂ 1,075 ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News