160 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ: ಸಚಿವ ದಿನೇಶ್ ಗುಂಡೂರಾವ್
ಬೆಳಗಾವಿ: ರಾಜ್ಯದಲ್ಲಿ ಒಟ್ಟು 160 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಎಲ್ಲ ಅರ್ಹತೆಗಳನ್ನು ಹೊಂದಿವೆ. ಹಣಕಾಸಿನ ಲಭ್ಯತೆಯನ್ನು ಆಧರಿಸಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ.
ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಅಪ್ಪಾಜಿ ಸಿ.ಎಸ್.ನಾಡಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಹೊಸ ತಾಲೂಕುಗಳಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ. ಹಲವು ಸ್ಥಳಗಳಲ್ಲಿ ಅಗತ್ಯ ಜನಸಂಖ್ಯೆ ಸೇರಿದಂತೆ ಎಲ್ಲ ಅರ್ಹತೆಗಳನ್ನು ಹೊಂದಿವೆ ಎಂದು ಹೇಳಿದರು.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಒಟ್ಟು 44 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಅದೇ ರೀತಿಯಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಅವರು ತಿಳಿಸಿದರು.
ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಸದಸ್ಯ ಅಪ್ಪಾಜಿ ನಾಡಗೌಡ, ಮುದ್ದೇಬಿಹಾಳ ತಾಲೂಕಿನಿಂದ ತಾಳಿಕೋಟೆಯನ್ನು ಪ್ರತ್ಯೇಕ ತಾಲೂಕು ಘೋಷಣೆ ಮಾಡಿದ್ದು, ಅಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕು. ಆ ತಾಲೂಕಿನ ವಿಸ್ತಾರ ಮತ್ತು ಜನಸಂಖ್ಯೆಯೂ ಹೆಚ್ಚಿದೆ ಎಂದು ಗಮನ ಸೆಳೆದರು.