ಸಾರಿಗೆ ನಿಗಮದ ವಾಹನಗಳಲ್ಲಿ ವೆಹಿಕಲ್ ಟ್ರ್ಯಾಕಿಂಗ್ ವ್ಯವಸ್ಥೆ: ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ
ಬೆಂಗಳೂರು, ಆ.10: ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಲ್ಲಿ ವೆಹಿಕಲ್ ಟ್ರ್ಯಾಕಿಂಗ್ ವ್ಯವಸ್ಥೆ ಹಾಗೂ ಪ್ಯಾನಿಕ್ ಬಟನ್ ವ್ಯವಸ್ಥೆಯೊಂದಿಗೆ ಕೇಂದ್ರೀಕೃತ ನಿಯಂತ್ರಣ ಕೊಠಡಿ ಸಹಿತವಾಗಿ ಅಳವಡಿಸುವ 30.74 ಕೋಟಿ ರೂ.ವೆಚ್ಚದ ಯೋಜನೆಗೆ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆಯ ಜಾರಿಯಿಂದ ನೈಜ ಸಮಯದಲ್ಲಿ ಪ್ರಯಾಣಿಕರ ಮಾಹಿತಿ ವ್ಯವಸ್ಥೆ, ಸುಧಾರಿತ ನಿರ್ವಹಣಾ ಮಾಹಿತಿ ವ್ಯವಸ್ಥೆ, ಬಸ್‍ಗಾಗಿ ಕಾಯುವ ಅನಿಶ್ಚಿತತೆ ಕಡಿಮೆಗೊಳಿಸಬಹುದು ಎಂದರು.
ಪ್ರಯಾಣದ ಸಮಯ/ಕಾಯುವ ಸಮಯ ಕಡಿಮೆಗೊಳಿಸುವುದು, ಬಸ್ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ವೃದ್ಧಿಸುವುದು, ಆರ್ಥಿಕ ಉತ್ಪಾದತೆ ಹೆಚ್ಚಿಸುವುದು, ಸುಧಾರಿತ ಪ್ರಯಾಣ, ಅಪಘಾತ ಮತ್ತು ಅವಘಡಗಳ ನಿಯಂತ್ರಣ ಇತ್ಯಾದಿ ಪ್ರಯೋಜನಗಳಿರುತ್ತವೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್-ಎಂಆರ್‍ಐ ಸ್ಕ್ಯಾನ್ ಯಂತ್ರ ಅಳವಡಿಕೆ: ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಮೈಸೂರು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ, ಇಂದಿರಾನಗರದ ಸಿ.ವಿ.ರಾಮನ್ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಹಾಗೂ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಯಂತ್ರಗಳನ್ನು ಅಳವಡಿಸಲಾಗುವುದು ಎಂದು ಅವರು ತಿಳಿಸಿದರು.
ಜಯನಗರ ಸಾರ್ವಜನಿಕ ಆಸ್ಪತ್ರೆ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲಾ ಆಸ್ಪತ್ರೆ, ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಉಡುಪಿ, ವಿಜಯನಗರ, ಚಿಕ್ಕೋಡಿ, ಅರಸೀಕೆರೆ ಸೇರಿದಂತೆ 15 ಆಸ್ಪತ್ರೆಗಳಲ್ಲಿ ಅಂದಾಜು 47.41 ಕೋಟಿ ರೂ.ವೆಚ್ಚದಲ್ಲಿ ಎಂಆರ್‍ಐ ಸ್ಕ್ಯಾನ್ ಯಂತ್ರಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಏರೋಸ್ಪೇಸ್-ರಕ್ಷಣಾ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ: ಸೈಬರ್ ಅಪರಾಧಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಏರೋಸ್ಪೇಸ್ ಹಾಗೂ ರಕ್ಷಣಾ ಉತ್ಕøಷ್ಟತಾ ಕೇಂದ್ರ ಸ್ಥಾಪಿಸುವ 391 ಕೋಟಿ ರೂ.ಗಳ ಯೋಜನೆಗೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ. ಡಸಾಲ್ಟ್ ಸಿಸ್ಟಮ್ಸ್ ಸಂಸ್ಥೆಯೊಂದಿಗೆ ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಗೆ ಬರಲಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.
ಸೈಬರ್ ಭದ್ರತಾ ನೀತಿ: ಸೈಬರ್ ಭದ್ರತಾ ನೀತಿ 2023-24 ಜಾರಿಗೆ ತರಲು ಸಚಿವ ಸಂಪುಟ ನಿರ್ಧರಿಸಿದೆ. ರಾಜ್ಯದಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಸೈಬರ್ ಭದ್ರತೆ ಹಾಗೂ ದತ್ತಾಂಶ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಈ ನೀತಿ ಜಾರಿಗೆ ತರಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಹಾಗೂ ಸಂಘ ಸಂಸ್ಥೆಗಳ ನೆರವಿನೊಂದಿಗೆ ಸಾರ್ವಜನಿಕರಲ್ಲಿ ಸೈಬರ್ ಭದ್ರತೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಕಾಲಕಾಲಕ್ಕೆ ಅದರ ಮೌಲ್ಯಮಾಪನ ಮಾಡಲು ಈ ನೀತಿ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.
ಬೆಂಗಳೂರಿನಲ್ಲಿರುವ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಬಾರ್ಡ್ ಮೂಲಕ ಪುನರ್‍ಧನ ಪಡೆಯಲು 1600 ಕೋಟಿ ರೂ.ಗಳ ಸರಕಾರಿ ಖಾತ್ರಿಯನ್ನು ವಿಸ್ತರಿಸಿರುವುದಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ. ಅಲ್ಲದೆ, ಬ್ಯಾಂಕಿಗೆ ವಿಧಿಸುತ್ತಿರುವ ಶೇ.1ರಷ್ಟು ಗ್ಯಾರಂಟಿ ಶುಲ್ಕವನ್ನು ಕಡಿಮೆ ಮಾಡುವಂತೆ ಬಂದಿರುವ ಮನವಿಯನ್ನು ಪರಿಶೀಲಿಸಿ ಅಗತ್ಯ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿಗೆ ಸಂಪುಟ ಸಭೆ ಅಧಿಕಾರ ನೀಡಿದೆ ಎಂದು ಅವರು ತಿಳಿಸಿದರು.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 187 ಕೋಟಿ ರೂ.ಗಳ ಪರಿಷ್ಕøತ ಅಂದಾಜು ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹಿಂದೆ ಇದರ ಅಂದಾಜು ವೆಚ್ಚ 140 ಕೋಟಿ ರೂ.ಗಳಾಗಿತ್ತು ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕೇಂದ್ರಗಳ ಮೂಲಕ ಪೂರಕ ಪೌಷ್ಟಿಕ ಆಹಾರ ವಿತರಿಸಲು ಪಾಮೋಲಿನ್ ಪಾಮೋಲಿನ್ ಬದಲಾಗಿ ಸೂರ್ಯಕಾಂತಿ ಎಣ್ಣೆಯನ್ನು 66.04 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಟೆಂಡರ್ ಮೂಲಕ ಖರೀದಿಸಲು ನಿರ್ಧರಿಸಲಾಗಿದೆ. ಇದರಿಂದಾಗಿ, ಸರಕಾರಕ್ಕೆ 9.9 ಕೋಟಿ ರೂ.ಹೆಚ್ಚುವರಿ ಹೊರೆಯಾಗಲಿದೆ ಎಂದು ಅವರು ತಿಳಿಸಿದರು.
ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕಕ್ಕೆ ಅನುಮೋದನೆ: ‘ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ‘ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ’ ಎಂದು ಮರು ನಾಮಕರಣಗೊಳಿಸಲು ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ 2023ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಈ ವಿಧೇಯಕ ಮಂಡಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಈ ಮಂಡಳಿಯ ವ್ಯಾಪ್ತಿಗೆ ಉತ್ತರಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 21 ತಾಲೂಕುಗಳನ್ನು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗೆ ಸೇರಿಸಲು ನಿರ್ಧರಿಸಲಾಗಿದೆ.