ಮುಡಾ, ವಾಲ್ಮೀಕಿ ನಿಗಮದ ಹಗರಣ ಕುರಿತು ಸಿಎಂ ಸದನದಲ್ಲಿ ಉತ್ತರ ನೀಡಬೇಕು : ವಿಜಯೇಂದ್ರ ಆಗ್ರಹ
ಬೆಂಗಳೂರು : ಸಾವಿರಾರು ಕೋಟಿ ರೂ. ಮೊತ್ತದ ಮುಡಾ ಹಗರಣ ಮತ್ತು ದಲಿತರ ಹಣವನ್ನು ಲೂಟಿ ಮಾಡಿದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಉತ್ತರ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಸೋಮವಾರ ಶಾಸಕರ ಭವನದ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಬಿಜೆಪಿ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,"ಮುಡಾ ಹಗರಣದ ತನಿಖೆಯನ್ನು ನಿವೃತ್ತ ನ್ಯಾಯಾಧೀಶರಿಂದ ನಡೆಸಿದರೆ ಸಾಲದು. ಮುಖ್ಯಮಂತ್ರಿಗಳಿಗೆ ನಿಜವಾಗಿ ತಾಕತ್ತಿದ್ದರೆ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು" ಎಂದು ವಿಜಯೇಂದ್ರ ಒತ್ತಾಯಿಸಿದರು.
"ಮಾನ್ಯ ಸಿದ್ದರಾಮಯ್ಯನವರು ದಲಿತರ ಹೆಸರು ಹೇಳಿಕೊಂಡು, ಪರಿಶಿಷ್ಟ ವರ್ಗ, ಪರಿಶಿಷ್ಟ ಪಂಗಡದವರಿಗೆ ನ್ಯಾಯ ಕೊಡುವುದಾಗಿ ಹೇಳಿಕೊಂಡು ಅಧಿಕಾರಕ್ಕೆ ಬಂದವರು. ಆದರೆ, ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದಲ್ಲದೆ, ಅದೇ ಮೊತ್ತದಲ್ಲಿ ಲೋಕಸಭಾ ಚುನಾವಣೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಸರಕಾರದ ಬಂಡವಾಳ ಈ ಮೂಲಕ ಬಯಲಾಗಿದೆ" ಎಂದು ಟೀಕಿಸಿದರು.