ದಬ್ಬಾಳಿಕೆ ಮುಂದುವರೆದರೆ ಪೊಲೀಸ್ ಠಾಣೆಗೆ ಮುತ್ತಿಗೆ : ವಿಜಯೇಂದ್ರ ಎಚ್ಚರಿಕೆ

Update: 2024-09-25 10:24 GMT

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಪದೇ ಪದೇ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಪೊಲೀಸ್ ಅಧಿಕಾರಿಗಳು ಇದೇ ರೀತಿ ದೌಲತ್ತಿನಿಂದ ನಡೆದುಕೊಂಡರೆ ನನ್ನನ್ನೂ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಕೆ ನೀಡಿದರು.

ಬುಧವಾರ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, "ಪೊಲೀಸರು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ವಿನಾಕಾರಣ ಎಫ್‍ಐಆರ್ ದಾಖಲಿಸುತ್ತಿದ್ದಾರೆ. ಆಡಳಿತ ಪಕ್ಷಕ್ಕೆ ಖುಷಿಪಡಿಸಲು ಅಧಿಕಾರಿಗಳ ಈ ನಡವಳಿಕೆ ಅಕ್ಷಮ್ಯ ಅಪರಾಧ" ಎಂದು ಟೀಕಿಸಿದರು.

"ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿನ್ನೆ ನಮ್ಮ ಬಿಜೆಪಿಯ ಕಾರ್ಯಕರ್ತೆ ಛಾಯಾ ಅವರು ಸದಸ್ಯತ್ವ ಅಭಿಯಾನ ಮಾಡುವ ಸಂದರ್ಭದಲ್ಲಿ ರಾತ್ರಿ ಏಕಾಏಕಿ ಪೊಲೀಸರು ಆ ಹೆಣ್ಮಗಳನ್ನು ಕರೆದುಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ಕೂರಿಸಿದ್ದಾರೆ. ಎಫ್‍ಐಆರ್ ದಾಖಲಿಸುವುದಾಗಿ ಹೇಳಿದ್ದಾರೆ. ನಮ್ಮ ಕಾರ್ಯಕರ್ತರು ಮತ್ತು ಮುಖಂಡರು ಪೊಲೀಸ್ ಠಾಣೆಗೆ ಧಾವಿಸಿ ಹೋಗಿ ಕಾರಣ ಕೇಳಿದ್ದಾರೆ. ಆಗ ಒಟಿಪಿಗಳನ್ನು ಡೌನ್‍ಲೋಡ್ ಮಾಡುತ್ತಿದ್ದಾರೆಂದು ಏನೇನೋ ಕಥೆ ಹೇಳಿಕೊಂಡು ಆ ಹೆಣ್ಮಗಳನ್ನು ರಾತ್ರಿ 12ರವರೆಗೆ ಪೊಲೀಸ್ ಠಾಣೆಯಲ್ಲಿ ಕೂರಿಸಿಕೊಂಡು ದಬ್ಬಾಳಿಕೆ ಮಾಡಿದ್ದಾರೆ" ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಸಿಎಂ ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು :

ಮುಖ್ಯಮಂತ್ರಿಗಳು ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. ರಾಜ್ಯದ ಜನರ ಅಭಿಪ್ರಾಯಕ್ಕೆ ನೀವು ಮನ್ನಣೆ ನೀಡಬೇಕು. ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ತಮ್ಮ ಕುಟುಂಬಕ್ಕೆ ನೀಡಿದ್ದು, ಇದರಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತಮ್ಮ ಭಂಡತನ ಬದಿಗಿಟ್ಟು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಹೈಕೋರ್ಟ್ ತೀರ್ಪಿನ ನಂತರ ಸಿಎಂ ಹೇಳಿಕೆಯನ್ನು ಗಮನಿಸಿದ್ದೇನೆ. ಮುಖ್ಯಮಂತ್ರಿಗಳು ತಮ್ಮ ಭಂಡತನದಿಂದ ಇನ್ನೂ ಹೊರಕ್ಕೆ ಬರುತ್ತಿಲ್ಲ. ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. ರಾಜಭವನ ದುರುಪಯೋಗ ಆಗುತ್ತಿದೆ ಎಂದು ಮತ್ತೊಮ್ಮೆ ಹೇಳಿದ್ದಾರೆ. ಮತ್ತೊಂದು ಕಡೆ ತಾನೇನೂ ತಪ್ಪು ಮಾಡಿಲ್ಲ. ರಾಜೀನಾಮೆ ಕೊಡುವ ಪ್ರಶ್ನೆ ಉದ್ಭವವಿಸುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಆಕ್ಷೇಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News