ಕಾಂಗ್ರೆಸ್ ಅಧಿವೇಶನ ವಿರೋಧಿಸಿ ನಾಳೆ ಗಾಂಧಿ ಪ್ರತಿಮೆ ಮುಂದೆ ಬಿಜೆಪಿಯಿಂದ ಧರಣಿ : ವಿಜಯೇಂದ್ರ

Update: 2024-12-26 10:23 GMT

ಬೆಂಗಳೂರು : ದೇಶ, ರಾಜ್ಯದಲ್ಲಿರುವುದು ಅಸಲಿ ಕಾಂಗ್ರೆಸ್ ಪಕ್ಷವಲ್ಲ, ಇದು ನಕಲಿ ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಗುರುವಾರ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿ ಮತ್ತು ಡಾ.ಅಂಬೇಡ್ಕರ್ ಅವರ ತತ್ವಗಳನ್ನು ಕಾಂಗ್ರೆಸ್ ಪಕ್ಷ ಗಾಳಿಗೆ ತೂರಿದೆ. ಗಾಂಧೀಜಿ ಮತ್ತು ಅಂಬೇಡ್ಕರ್‌ ಅವರ ಹೆಸರು ಹೇಳುವ ನೈತಿಕತೆ, ಯೋಗ್ಯತೆ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ಪಕ್ಷದವರಿಗೆ ಈ ದೇಶದ ಬಗ್ಗೆ, ಅಖಂಡತೆ, ಸಮಗ್ರತೆ ಬಗ್ಗೆ ಬದ್ಧತೆ ಇಲ್ಲ. ದೇಶ ಒಡೆಯುವ ಕೆಲಸವನ್ನು ಕಾಂಗ್ರೆಸ್ಸಿಗರೇ ಮಾಡಿದ್ದಾರೆ ಎಂದು ಹೇಳಿದರು. ಬಾಬಾ ಸಾಹೇಬರಿಗೆ ಸಂಬಂಧಿಸಿದ 5 ಪ್ರಮುಖ ಸ್ಥಳಗಳನ್ನು ಪ್ರಧಾನಿ ನರೇಂದ್ರ ಮೋದಿಜೀ ಅವರು ಪಂಚತೀರ್ಥಗಳನ್ನಾಗಿ ಅಭಿವೃದ್ಧಿಪಡಿಸಿದ್ದಾರೆ ಎಂದು ವಿವರಿಸಿದರು.

ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಮಹಾಧಿವೇಶನ ಮಾಡಲು ಹೊರಟಿರುವುದು ಸರಿಯಲ್ಲ . ನಕಲಿ ಕಾಂಗ್ರೆಸ್ಸಿನ ಈ ನೀತಿಯ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನವನ್ನು ವಿರೋಧಿಸಿ ನಾಳೆ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಿದ್ದೇವೆ. ವಿಧಾನಸಭೆ-ವಿಧಾನಪರಿಷತ್ತಿನ ಸದಸ್ಯರು ಇದರಲ್ಲಿ ಭಾಗವಹಿಸುವರು ಎಂದು ತಿಳಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News