ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್

Update: 2024-03-06 15:30 GMT

ಬೆಂಗಳೂರು: ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬುಧವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ಸಂಕಿರಣದಲ್ಲಿ ಭಾಗವಹಿಸಿ, ವಿವಿಧ ಮಹಿಳಾ ಸಂಘಟನೆಗಳು ಹಾಗೂ ಎನ್‍ಜಿಓಗಳಿಂದ ಸಲಹೆಗಳನ್ನು ಆಲಿಸಿ ಮಾತನಾಡಿದ ಅವರು, ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ, ಸಮಸ್ಯೆಯನ್ನು ಹೇಳಿಕೊಳ್ಳಿ ಎಂದರು.

ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದೇನೆ. ಮಹಿಳೆಯರು ತಮ್ಮ ಸಮಸ್ಯೆಗಳ ಕುರಿತು ದೂರು ನೀಡಲು ಠಾಣೆಗೆ ಬಂದರೆ ಕೂಡಲೆ ಸಮಸ್ಯೆಗಳನ್ನು ಆಲಿಸಬೇಕು. ನಮ್ಮ ಬೆನ್ನಿಗೆ ಪೊಲೀಸರು ಇದ್ದಾರೆ ಎಂಬ ಧೈರ್ಯ ಎಲ್ಲರಲ್ಲಿ ಮೂಡಬೇಕು. ಮಹಿಳೆಯರು ಮತ್ತು ಮಕ್ಕಳ ದೂರುಗಳ ಬಗ್ಗೆ ತಾತ್ಸರ ಮಾಡಿದರೆ ಸಹಿಸುವುದಿಲ್ಲ. ಮಹಿಳೆಯರು ಧೈರ್ಯವಾಗಿದ್ದರೆ ಒಳ್ಳೆ ಆಡಳಿತ, ಜನಸ್ನೇಹಿ ಪೊಲೀಸ್ ಎನಿಸಿಕೊಳ್ಳಲು ಸಾಧ್ಯ ಎಂದು ಅಧಿಕಾರಿಗಳಿಗೆ ಜಿ.ಪರಮೇಶ್ವರ್ ಕಿವಿಮಾತು ಹೇಳಿದರು.

ಈ ಹಿಂದೆ ಪೊಲೀಸ್ ಸಹಾಯವಾಣಿ ಮೂಲಕ ಬಂದ ದೂರುಗಳನ್ನು ಆಧರಿಸಿ, ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಲು 20 ನಿಮಿಷ ತೆಗೆದುಕೊಳ್ಳುತ್ತಿದ್ದರು. ಪ್ರಸ್ತುತ 7 ನಿಮಿಷದೊಳಗೆ ಸ್ಥಳದಲ್ಲಿ ಹಾಜರಿರುತ್ತಾರೆ. ಬೆಂಗಳೂರು ನಗರದಲ್ಲಿ 7500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪೊಲೀಸರು ನಿರಂತರ ಕಣ್ಗಾವಲು ಇಟ್ಟಿರುತ್ತಾರೆ. ನಮ್ಮ ಸರಕಾರವು ಮಹಿಳಾ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಜಿ.ಪರಮೇಶ್ವರ್ ತಿಳಿಸಿದರು.

ಆ್ಯಸಿಡ್ ಮಾರಾಟ ನಿಷೇಧ

ನಗರದಲ್ಲಿ ಹೊಸದಾಗಿ 6 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತಿದೆ. ಈಗಿರುವ ಪೊಲೀಸ್ ಸಿಬ್ಬಂದಿಗಳಲ್ಲಿ ಶೇ.8ರಷ್ಟು ಮಹಿಳೆಯರಿದ್ದಾರೆ. ಶೇ.25ರಷ್ಟಾಗಬೇಕು ಎಂಬುದು ಗುರಿ ಹೊಂದಲಾಗಿದೆ. ಮಹಿಳಾ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು. ಆ್ಯಸಿಡ್ ಮಾರಾಟ ನಿಷೇಧ ಮಾಡಲಾಗುವುದು. ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದು ಜಿ.ಪರಮೇಶ್ವರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್ ನ ಡೀನ್ ಪ್ರಭಾಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News