ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ(ಮೇ 7) ಮತದಾನ

Update: 2024-05-06 15:22 GMT

ಬೆಂಗಳೂರು : ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕವೂ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದ ಮತದಾನ ನಾಳೆ(ಮೇ 7) ಬೆಳಗ್ಗೆ 7ಗಂಟೆಯಿಂದ ಆರಂಭವಾಗಲಿದ್ದು, ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಗೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಈಗಾಗಲೇ ಚುನಾವಣಾ ಸಿಬ್ಬಂದಿ ವಿದ್ಯುನ್ಮಾನ ಮತಯಂತ್ರಗಳು ಸೇರಿದಂತೆ ಅಗತ್ಯ ಚುನಾವಣಾ ಸಲಕರಣೆಗಳೊಂದಿಗೆ ಮತಗಟ್ಟೆಗಳಿಗೆ ತೆರಳಿದ್ದು, ಬೆಳಗ್ಗೆ 6ಗಂಟೆಯಿಂದಲೇ ಮತದಾನಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಿದ್ದಾರೆ. ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯ ವರೆಗೂ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ(ಎಸ್ಸಿ), ಗುಲ್ಬರ್ಗ(ಎಸ್ಸಿ), ರಾಯಚೂರು(ಎಸ್ಟಿ) ಬೀದರ್, ಕೊಪ್ಪಳ, ಬಳ್ಳಾರಿ(ಎಸ್ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

206 ಪುರುಷರು, 21 ಮಹಿಳೆಯರು ಸೇರಿದಂತೆ ಒಟ್ಟು 227 ಮಂದಿ ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿದ್ದಾರೆ. ದಾವಣಗೆರೆಯಲ್ಲಿ ಅತಿಹೆಚ್ಚು 30, ಬಿಜಾಪುರ ಹಾಗೂ ರಾಯಚೂರಿನಲ್ಲಿ ಅತಿ ಕಡಿಮೆ ತಲಾ 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1.29 ಕೋಟಿಗೂ ಅಧಿಕ ಪುರುಷ, 1.29 ಕೋಟಿ ರೂ.ಅಧಿಕ ಮಹಿಳೆಯರು ಸೇರಿದಂತೆ ಒಟ್ಟು 2.59 ಕೋಟಿಗೂ ಅಧಿಕ ಮತದಾರರು ಹಕ್ಕು ಚಲಾಯಿಸಲಿದ್ದಾರೆ.

ಮತದಾನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ವಿಶೇಷ ಮತಗಟ್ಟೆಗಳನ್ನು ತೆರೆದಿದ್ದು, ಪ್ರತಿ ಕ್ಷೇತ್ರದಲ್ಲಿ ಸಖಿ, ಯುವ, ವಿಶೇಷಚೇತನರ ಮತಗಟ್ಟೆ ಹಾಗೂ ಸ್ಥಳೀಯ ವಿಷಯಾಧಾರಿತ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಾಜ್ಯದ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಎ.26ರಂದು ಮತದಾನ ನಡೆದಿತ್ತು.

ಮುನ್ನಚ್ಚರಿಕೆ ಕ್ರಮವಾಗಿ ಮೇ 7ರ ಮಧ್ಯರಾತ್ರಿ 12ಗಂಟೆಯ ವರೆಗೂ ಚುನಾವಣೆ ನಡೆಯಲಿರುವ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ, ವಿತರಣೆ, ಸಾಗಣೆ, ಸಂಗ್ರಹಣೆಯನ್ನು ನಿಷೇಧಿಸಲಾಗಿದೆ. ಮತಗಟ್ಟೆಗಳ ವ್ಯಾಪ್ತಿಯಲ್ಲಿ ಕಲಂ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

2.59 ಕೋಟಿಗೂ ಅಧಿಕ ಮತದಾರರು: 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 2,59,52,958 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಆಪೈಕಿ 1,29,67,607-ಮಹಿಳೆಯರು, 1,29,83,406-ಪುರುಷ, 35,465 ಸೇವಾ ಮತದಾರರಿದ್ದಾರೆ. ಕಲಬುರಗಿ ಕ್ಷೇತ್ರದಲ್ಲಿ ಅತೀ ಹೆಚ್ಚು 20,98,202 ಮತದಾರರಿದ್ದರೆ, ಉತ್ತರ ಕನ್ನಡ ಕ್ಷೇತ್ರದಲ್ಲಿ 16,41,156 ಮತದಾರರಿದ್ದಾರೆ.

28,269 ಮತಗಟ್ಟೆಗಳ ಸ್ಥಾಪನೆ: 14 ಲೋಕಸಭಾ ಕ್ಷೇತ್ರಗಳಲ್ಲಿ 12 ಉಪ ಮತಗಟ್ಟೆಗಳು ಸೇರಿದಂತೆ ಒಟ್ಟು 28,269 ಮತಗಟ್ಟೆಗಳನ್ನು ತೆರೆಯಲಾಗುತ್ತದೆ. ಅತ್ಯಂತ ಹೆಚ್ಚು ರಾಯಚೂರು ಕ್ಷೇತ್ರದಲ್ಲಿ 2,203, ಅದೇ ರೀತಿಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ 2,166 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ: ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಹಿಯನ್ನು ಹಾಕಲಾಗುತ್ತದೆ. ಮತದಾರರಿಗೆ ಈಗಾಗಲೇ ಆಯೋಗದಿಂದ ನೀಡಿರುವ ಓಟರ್ ಸ್ಲಿಪ್ ಹಾಗೂ ಮತದಾರರ ಗುರುತಿನ ಚೀಟಿಯನ್ನು ಹಾಜರುಪಡಿಸಿ ಮತದಾನ ಮಾಡಬಹುದು.

ಕಣದಲ್ಲಿರುವ ಘಟಾನುಘಟಿಗಳು: ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಯಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಭಗವಂತ ಖೂಬಾ ಕಣದಲ್ಲಿದ್ದಾರೆ.

ಸಚಿವರ ಮಕ್ಕಳಿಗೆ ಸವಾಲು: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಳ್ ಹೆಬ್ಬಾಳ್ಕರ್, ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಬೀದರ್ ಲೋಕಸಭಾ ಕ್ಷೇತ್ರದಿಂದ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ, ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅದೇ ರೀತಿ, ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್ ಇದೇ ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಇಳಿದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News