ಪೋಕ್ಸೋ ಪ್ರಕರಣ | ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ವಾರೆಂಟ್ ಜಾರಿ
ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ.
ಪೋಕ್ಸೋ ಪ್ರಕರಣದ ಆರೋಪಿ ಯಡಿಯೂರಪ್ಪ ಬಂಧನಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮೇಲಿನ ಆದೇಶ ನೀಡಿದೆ. ಸಂತ್ರಸ್ಥ ಬಾಲಕಿಯನ್ನು ಕೊಠಡಿಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಈ ವಾದ ಆಲಿಸಿದ ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ.ರಮೇಶ್ ಬಂಧನಕ್ಕೆ ವಾರೆಂಟ್ ಜಾರಿಗೊಳಿಸಿದ್ದಾರೆ.
ವಿಚಾರಣೆ ವೇಳೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ವಾದ ಮಂಡಿಸಿ, ಆರೋಪಿಯು ತುಂಬಾ ಬಲಾಢ್ಯರು. ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಇವರ ಇಬ್ಬರು ಪುತ್ರರಲ್ಲಿ ಒಬ್ಬರು ಹಾಲಿ ಸಂಸದರು ಮತ್ತೊಬ್ಬರು ಪಕ್ಷವೊಂದರ ರಾಜ್ಯ ಘಟಕದ ಅಧ್ಯಕ್ಷರು. ಇಂತಹವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗುತ್ತಿಲ್ಲ. ಘಟನೆ ನಡೆದ ದಿನವೇ ಯಡಿಯೂರಪ್ಪ ಸಂತ್ರಸ್ತ ಬಾಲಕಿಯ ತಾಯಿಗೆ ಎರಡು ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಸಮಾಧಾನ ಮಾಡುವ ನೆಪದಲ್ಲಿ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ಆ ಮಹಿಳೆ ಮಾಡಿಕೊಂಡಿದ್ದ ವಿಡಿಯೊ ಡಿಲೀಟ್ ಮಾಡಿಸಿದ್ದಾರೆ. ಹೀಗೆ ಹಲವು ಹಂತಗಳಲ್ಲಿ ಸಾಕ್ಷ್ಯ ನಾಶ ಮಾಡುತ್ತಲೇ ಇದ್ದಾರೆ.
ಒಂದು ವೇಳೆ ಅವರು ಕೇಳಿದಷ್ಟು ಸಮಯ ನೀಡಿದ್ದೇ ಆದರೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ, ಕೂಡಲೇ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲು ಆದೇಶಿಸಬೇಕು ಎಂದು ಕೋರಿದರು. ವಾದ ಆಲಿಸಿದ ನ್ಯಾಯಾಧೀಶ ಎನ್.ಎಂ. ರಮೇಶ್ ಆದೇಶ ನೀಡಿದ್ದಾರೆ.