ನಮ್ಮದು ಸಾಮಾಜಿಕ ಬದ್ಧತೆಯುಳ್ಳ ಸರಕಾರ: ಸಿಎಂ ಸಿದ್ದರಾಮಯ್ಯ

Update: 2024-02-11 14:43 GMT

ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ಬಜೆಟ್ ಗಾತ್ರ ಹೆಚ್ಚಾದರೂ ಪರಿಶಿಷ್ಟರ ಕಲ್ಯಾಣ ಕಾರ್ಯಗಳಿಗೆ ಮೀಸಲಿಡುವ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಅನುದಾನ ಹೆಚ್ಚಾಗಿರಲಿಲ್ಲ. ಆದರೆ, ಕಾಂಗ್ರೆಸ್ ನೇತೃತ್ವದ ನಮ್ಮ ಸರಕಾರ ಸಾಮಾಜಿಕ ಬದ್ಧತೆಯುಳ್ಳ ಸರಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರವಿವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024-25ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು. ರಾಜ್ಯದಲ್ಲಿ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. 2008ರಿಂದ 2013ರ ವರೆಗೆ 22ಸಾವಿರ ಕೋಟಿ ರೂ. ವೆಚ್ಚವಾಗಿದೆ. 2013ರಿಂದ 2018ರ ವರೆಗೆ 88ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ ಎಂದರು. 

ಪರಿಶಿಷ್ಟರಿಗೆ ಮೀಸಲಿಟ್ಟ ಹಣ ಹೆಚ್ಚು ದುರುಪಯೋಗವಾಗುತ್ತದೆ ಎಂಬ ಕಾರಣದಿಂದ ಕಾಯ್ದೆಯಲ್ಲಿದ್ದ ‘7 ಡಿ’ಯನ್ನು ತೆಗೆದುಹಾಕಿ ಆದೇಶವನ್ನು ಹೊರಡಿಸಿದೆ. ಆರ್ಥಿಕ ವರ್ಷದಲ್ಲಿ ಹಣ ಖರ್ಚಾಗದಿದ್ದರೆ ಮುಂದಿನ ವರ್ಷಕ್ಕೆ ಮುಂದುವರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರುಪಯೋಗವಾದರೆ ಕ್ರಿಮಿನಲ್ ಮೊಕದ್ದಮೆ ಹೂಡಬಹುದು ಎಂದು ಅವರು ತಿಳಿಸಿದರು.

ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಖರ್ಚು ಮಾಡಬೇಕು ಎಂದು ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯದಲ್ಲಿ ಮಾತ್ರ ಕಾಯ್ದೆ ತರಲಾಗಿದೆ. ಇದು ಇಡೀ ದೇಶದಲ್ಲಿ ಆಗಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಮುಖ ಯೋಜನೆಯಾಗಬೇಕೆಂದು ಸೂಚಿಸಿದೆ ಎಂದು ಅವರು ತಿಳಿಸಿದರು. 

ಭಡ್ತಿಯಲ್ಲಿ ಮೀಸಲಾತಿ ಕಾಯ್ದೆ ಮಾಡಿದ್ದು ಇಡೀ ದೇಶದಲ್ಲಿ ಕರ್ನಾಟಕ ಮಾತ್ರ. ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ಮಾಡಿದೆ. ಎಸ್‍ಸಿ-ಎಸ್‍ಟಿ ಜನಾಂಗದವರಿಗೆ ಸರಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ 1 ಕೋಟಿ ರೂ.ವರೆಗೆ ಮೀಸಲಾತಿ ಕಲ್ಪಿಸಲಾಗಿದೆ. ಪರಿಶಿಷ್ಟರಿಗೆ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬಲು ಈ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ನುಡಿದರು.

ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ.17.15 ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.7ರಷ್ಟಕ್ಕೆ ಹೆಚ್ಚಿಸಿದ್ದು, ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಒದಗಿಸಬೇಕು. ಆ ದೃಷ್ಟಿಯಿಂದ ಪ್ರಸಕ್ತ ಬಜೆಟ್‍ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಕಲ್ಯಾಣಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಪ್ರಕಟಿಸಿದರು.

ಸಭೆಯಲ್ಲಿ ಹಿಂ.ವರ್ಗಗಳ ಕಲ್ಯಾಣ ಸಚಿವ ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್ ಅಹ್ಮದ್, ಸಿಎಂ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಯೋಜನಾ ಆಯೋಗದ ಉಪಾಧ್ಯಕ್ಷ ರಾಜೀವ್‍ಗೌಡ ಹಾಗೂ ಹಿರಿಯ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News