ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರ ಗೆಲ್ಲುತ್ತೇವೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಿಸಿದ್ದು, ಎಲ್ಲ ಚುನಾವಣೆಗೂ ಕಾಂಗ್ರೆಸ್ ಪಕ್ಷ ಸಜ್ಜಾಗಿದ್ದು, ಮೂರು ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಚುನಾವಣಾ ಆಯೋಗ ಉಪಚುನಾವಣಾ ದಿನಾಂಕ ಘೋಷಣೆ ಮಾಡಿರುವುದನ್ನು ಸ್ವಾಗತಿಸುತ್ತೇನೆ. ಮೂರು ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ ನಮ್ಮ ತಯಾರಿ ಆರಂಭವಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಚನ್ನಪಟ್ಟಣ ಉಪಚುನಾವಣೆಯಲ್ಲಿ ನಾನೇ ಅಭ್ಯರ್ಥಿ. ಬಿಜೆಪಿ ಮುಖಂಡ ಯೋಗೇಶ್ವರ್ ವಿಚಾರವಾಗಿ ನಾನು ಯಾರ ಮಾತನ್ನು ಕೇಳುವುದಿಲ್ಲ. ಅವರ ಪಕ್ಷಗಳಿಂದ ಅಭ್ಯರ್ಥಿ ಅಂತಿಮ ಆಯ್ಕೆಯಾಗಲಿ. ಅವರು ಕೈಗೊಳ್ಳುವ ನಿರ್ಧಾರದ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿ, ಆಗ ನಾನು ಅದನ್ನು ನಂಬುತ್ತೇನೆ ಎಂದು ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.