ನಾಳೆಯಿಂದಲೇ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ: ಸಚಿವ ಈಶ್ವರ್ ಖಂಡ್ರೆ

Update: 2024-08-04 14:10 GMT

ಸಾಂದರ್ಭಿಕ ಚಿತ್ರ 

ಬೆಂಗಳೂರು: ಪಶ್ಚಿಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಅರಣ್ಯ ಒತ್ತುವರಿ ತೆರವುಗೊಳಿಸಲು ಕಾರ್ಯಪಡೆಯನ್ನು ರಚಿಸಲಾಗಿದ್ದು, ಸೋಮವಾರ(ಆ.5)ದಿಂದಲೇ ಕಾರ್ಯಾಚರಣೆ ಜರುಗಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ರವಿವಾರ ಈ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದೆ ಎಂದರು.

ಅದರಲ್ಲೂ ಘಟ್ಟ ಪ್ರದೇಶಗಳಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್‍ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ್ಮ ತಮ್ಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಸೂಚನೆ ನೀಡಿರುವುದಾಗಿ ಅವರು ವಿವರಿಸಿದರು.

ಈಗಾಗಲೇ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚಿಸಿದ್ದೇವೆ ಎಂದ ಅವರು, ಮೊದಲಿಗೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್, ಹೋಂ ಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ, ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ ಎಂದು ನುಡಿದರು.

ಹಾಗೇ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಪಶ್ಚಿಮ ಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ. ಇಂಥ ಚಟುವಟಿಕೆಯಿಂದ ಪರಿಸರಕ್ಕೆ ಆಗುವ ಹಾನಿಯನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದೂ ಅವರು ಉಲ್ಲೇಖಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News