ದೇಶ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ, ದೇಶಕ್ಕೆ ನಾವೇನು ಕೊಟ್ಟೆವು ಎನ್ನುವುದು ಮುಖ್ಯ: ಸಿಎಂ ಸಿದ್ದರಾಮಯ್ಯ
ದಾವಣಗೆರೆ ಜ.5: ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇದರಿಂದ ದೇಶದ, ರಾಜ್ಯದ ಪ್ರಗತಿಯೂ ನಾಶವಾಗುತ್ತದೆ. ಇಂತಹ ವಿಕೃತರಿಂದ ಯುವ ಜನತೆ ದೂರ ಉಳಿದು ತಮ್ಮ ಬದುಕು-ಭವಿಷ್ಯ ಕಾಪಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.
ಜಿಲ್ಲಾಡಳಿತ ಆಯೋಜಿಸಿದ್ದ ರಾಜ್ಯ ಮಟ್ಟದ ಯುವ ಜನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಯುವ ಜನತೆ ಸಮಾಜಮುಖಿಯಾಗಿ ಬೆಳೆದಾಗ ದೇಶದ ಆಸ್ತಿ ಆಗುತ್ತಾರೆ. ಇದಕ್ಕಾಗಿ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಪಡೆದು ಸಮಾನ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಸಮಾಜದ ಪ್ರಗತಿಗೆ ಕಾರಣರಾಗಬೇಕು. ನಾವು ದೇಶಕ್ಕೆ ಹೊರೆಯಾಗದೆ, ದೇಶಕ್ಕೆ ಸಂಪತ್ತಾಗಿ ಬೆಳೆಯಬೇಕು ಎನ್ನುವ ಸಂಕಲ್ಪದೊಂದಿಗೆ ಯುವ ಜನತೆ ಸಜ್ಜಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.
ಸಂವಿಧಾನದ ಸಾರ ಪ್ರತಿಯೊಬ್ಬರಿಗೂ ಅರ್ಥ ಆಗಬೇಕು. ಪ್ರತೀ ಪ್ರಜೆಗೂ ಅರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರೆಯಬೇಕು. ಪ್ರತಿಯೊಬ್ಬರಿಗೂ ಅವರವರ ಧರ್ಮ ನಂಬಿಕೆಯ ಆಚರಣೆಗೆ ಅವಕಾಶ ಇರಬೇಕು ಎನ್ನುವುದೇ ಸಂವಿಧಾನದ ಸಾರ. ಈ ಸಂವಿಧಾನ ಇದ್ದುದರಿಂದಲೇ ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು. ಆದ್ದರಿಂದ ಈ ಸಂವಿಧಾನವನ್ನು ಕಾಪಾಡುವುದೇ ನಮ್ಮ ಜವಾಬ್ದಾರಿ ಎಂದರು.
ದೇಶ ನಮಗೇನು ಕೊಟ್ಟಿತು ಎನ್ನುವುದಕ್ಕಿಂತ, ದೇಶಕ್ಕೆ ನಾವೇನು ಕೊಟ್ಟೆವು ಎನ್ನುವುದೇ ನಮಗೆ ಮುಖ್ಯವಾಗಬೇಕು. ದೇಶದ ನೆಮ್ಮದಿ ಕೆಡಿಸಲು, ಪ್ರಗತಿ ಹಾಳು ಮಾಡಲು ಕೆಲವರು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥಾ ವಿಕೃತರಿಂದ ಯುವ ಜನತೆ ದೂರ ಉಳಿದು ಮನುಷತ್ಯ ಬೆಳೆಸಿಕೊಂಡು, ಸಮಾಜಮುಖಿಯಾಗಿ ಬೆಳೆಯಬೇಕು. ಇದರಿಂದ ಪ್ರಜಾಪ್ರಭುತ್ವ ಉಳಿಸಿ, ಬೆಳೆಸಲು ಸಾಧ್ಯ ಎಂದರು.
ಒಂದು ಲಕ್ಷದ 62 ಸಾವಿರ ಮಂದಿ ಯುವ ಜನತೆಯ ಖಾತೆಗೆ ಯುವನಿಧಿ ಹಣ ವರ್ಗಾವಣೆ ಮಾಡಿ, ಇವರಿಗೆ ಸ್ಕಿಲ್ ತರಬೇತಿಯನ್ನೂ ನೀಡುತ್ತಿದ್ದೇವೆ. ಇದಕ್ಕಾಗಿ 213 ಕೋಟಿ ಹಣ ಕೊಟ್ಟಿದ್ದೇವೆ. ವಿದ್ಯಾವಂತ ನಿರುದ್ಯೋಗಿ ಪದವೀಧರರ ನೆರವಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕು ಎನ್ನುವ ಸಂಕಲ್ಪದಿಂದ ನಾವು ಕೆಲಸ ಮಾಡುತ್ತಿದ್ದೇವೆ ಎಂದರು.
ರಾಜ್ಯದ ಸಮೃದ್ಧಿ-ಶಾಂತಿಗಾಗಿ ಹಾರೈಸಿದ ಸಿಎಂ
ಹೊಸ ವರ್ಷಕ್ಕೆ ಶುಭಾಶಯ ಕೋರುವ ಮೂಲಕ ಮಾತು ಆರಂಭಿಸಿದ ಸಿಎಂ, ರಾಜ್ಯದ ಸಮೃದ್ಧಿ-ಶಾಂತಿಗಾಗಿ ಹಾರೈಸಿದರು. ಯುವ ಜನತೆ ಸಂಭ್ರಮದಿಂದ ಹೊಸ ವರ್ಷ ಬರ ಮಾಡಿಕೊಂಡು ಭವಿಷ್ಯ ರೂಪಿಸಿಕೊಳ್ಳುವ ಗಮನ ಹರಿಸಿ ಎಂದರು.