ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಅಬಿವೃದ್ದಿಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?: ಇಲ್ಲಿದೆ ಸಂಪೂರ್ಣ ಮಾಹಿತಿ

Update: 2024-02-16 10:59 GMT

Photo: X/@CMofKarnataka

ಬೆಂಗಳೂರು: ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಅನುವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

► ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ರೈತರಿಗೆ ಕೆಳಕಂಡ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗುವುದು:

  •  ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು.
  •  ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು.
  •  ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡುವುದು.
  • ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡುವುದು.
  •  ರೈತರಿಗೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಕುರಿತು ಅರಿವು ಮೂಡಿಸುವುದು.
  • ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು.

►  ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು.

► ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ ಅನ್ನು ಸ್ಥಾಪಿಸಲಾಗುವುದು.

►  ನಮ್ಮ ಮಿಲ್ಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್ಸ್ ಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು.

►  ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿ ವರ್ಷ

► 1,000 ದಂತೆ ಒಟ್ಟು 5,೦೦೦ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು.

► ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯ ಆರ್.ಕೆ. ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಗಳನ್ನು ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.

►  ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ ಸಲಹೆ ನೀಡಲು ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ e-SAP ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲು ಕ್ರಮ ವಹಿಸಲಾಗುವುದು.

► ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಕೃಷಿ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಯ ರಚಿಸಲಾಗುವುದು. ಇದರ ಮೂಲಕ ವಿವಿಧ ಇಲಾಖೆಗಳಡಿಯಲ್ಲಿರುವ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು.

► ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು ಕ್ರಮವಹಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕಾಗಿ PMFME ಯೋಜನೆಯಡಿಯಲ್ಲಿ 80 ಕೋಟಿ ರೂ.ಗಳನ್ನು ಒದಗಿಸಲಾಗುವುದು.

►  ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು.

►  ಕೃಷಿ ನಾವೀನ್ಯತೆಯ ಯುಗದಲ್ಲಿ ಪಾರಂಪರಿಕ ಕೃಷಿ ಪದ್ಧತಿಯಲ್ಲಿ ಗಣನೀಯ ಬದಲಾವಣೆಗಳಾಗಿದ್ದು, ಉಪಗ್ರಹ ಚಿತ್ರ, ಸೆನ್ಸರ್ಗಳ ಬಳಕೆ ಮತ್ತು ಮಷಿನ್ ಲರ್ನಿಂಗ್ ನಂತಹ (Machine Learning) ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಧರಿಸಿ ಬೆಳೆಯ ಉತ್ಪಾದಕತೆ ಮುನ್ಸೂಚನೆಯನ್ನು ಮಾಡಲು ಒಂದು ದತ್ತಾಂಶವನ್ನು ಅಭಿವೃದ್ಧಿಪಡಿಸಲಾಗುವುದು.

► ರೈತ ಉತ್ಪಾದಕ ಸಂಸ್ಥೆಗಳನ್ನು (FPO) ಇನ್ನಷ್ಟು ಸದೃಢ ಮತ್ತು ಸುಸ್ಥಿರವಾಗಿ ಕಾರ್ಯನಿರ್ವಹಿಸಲು ಪೂರಕವಾದ ತರಬೇತಿ, ಮಾರ್ಗದರ್ಶನ ಹಾಗೂ ಬೆಂಬಲ ನೀಡುವ Agri Accelerator Platform ಮೂಲಕ ಕೃಷಿ ವಲಯದ Start-up ಗಳನ್ನು ಉತ್ತೇಜಿಸಲಾಗುವುದು.

►  ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು.

ತೋಟಗಾರಿಕೆ

►  ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ ಗಳನ್ನು ಸ್ಥಾಪಿಸಲಾಗುವುದು.

► ರಾಜ್ಯದಲ್ಲಿ 40,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿರುವ ಪುಷ್ಪ ಬೆಳೆಗಳ ಮಾರಾಟ ಮತ್ತು ರಫ್ತನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

► ರಾಜ್ಯದಲ್ಲಿ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಚಟುವಟಿಕೆಗಳನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು.

►  ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚು ಇಂಗಾಲವನ್ನು ಹಿಡಿದಿಟ್ಟುಕೊಳ್ಳುವ ಬೆಳೆಗಳನ್ನು ಗುರುತಿಸಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ Carbon Credit ರೂಪದಲ್ಲಿ ಮಾರಾಟ ಮಾಡುವ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಲು ಅನುಕೂಲವಾಗುವಂತೆ ಉತ್ತೇಜನ ನೀಡಲಾಗುವುದು.

► ರಾಜ್ಯದಲ್ಲಿ ಸಾಂಬಾರು ಪದಾರ್ಥ ಬೆಳೆಗಳನ್ನು ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಹಾಗೂ ಬೆಳೆಗಳ ರಫ್ತನ್ನು ಉತ್ತೇಜಿಸಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕ್ (Spice Park) ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.

ರೇಷ್ಮೆ

►  ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

► ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹಧನವನ್ನು ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ವಾರ್ಷಿಕ 12 ಕೋಟಿ ರೂ. ಒದಗಿಸಲಾಗುವುದು.

►  ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ಪ್ರಸ್ತುತ ನೀಡುತ್ತಿರುವ ಪ್ರೋತ್ಸಾಹಧನವನ್ನು ಪ್ರತಿ ಕಿಲೋಗೆ 10 ರೂ.ನಿಂದ 30 ರೂ.ಗೆ ಹೆಚ್ಚಿಸಲಾಗುವುದು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News