ಸಂಡೂರು ಗಣಿ ಹಗರಣ, ಬೆದರಿಕೆ, ಸುಳ್ಳಾರೋಪ: ಕುಮಾರಸ್ವಾಮಿ ವಿರುದ್ಧದ ಆರೋಪಗಳೇನು? ಎಫ್‌ಐಆರ್ ದಾಖಲಾಗಿದ್ದೇಕೆ?

Update: 2024-11-05 12:48 GMT

ಎಚ್.ಡಿ. ಕುಮಾರಸ್ವಾಮಿ (Photo: PTI)

ಬೆಂಗಳೂರು: ಚೆನ್ನಪಟ್ಟಣ ಉಪಚುನಾವಣೆ ನಡುವೆ ಕೇಂದ್ರ ಉಕ್ಕು ಮತ್ತು ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸಂಕಷ್ಟ ಶುರುವಾಗಿದ್ದು, ಅವರ ವಿರುದ್ಧ ಬೆಂಗಳೂರಿನ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

ಎಸ್ಐಟಿ ಎಡಿಜಿಪಿ ಎಂ ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯ ನಗರ ಪೊಲೀಸ್ ಠಾಣೆಗೆ ಬೆದರಿಕೆ ಮತ್ತು ಸುಳ್ಳು ಆರೋಪಕ್ಕೆ ಸಂಬಂಧಿಸಿ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಆದೇಶದ ಮೇರೆಗೆ ಸಂಜಯ ನಗರ ಠಾಣೆಯಲ್ಲಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

2007ರ ಅಕ್ಟೊಬರ್ 5ರಂದು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಎನ್ಇಬಿ ರೇಂಜ್ ನಲ್ಲಿ 550 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಲೀಸ್ ನೀಡಲು ಲೈಸನ್ಸ್ ಗೆ ಅನುಮೋದಿಸುವ ಕಡತಕ್ಕೆ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಸಹಿ ಹಾಕಿದ್ದರು. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿ ಆಂಧ್ರಪ್ರದೇಶ ಮೂಲದ ಜಂತಕಲ್ ಮೈನಿಂಗ್ ಕಂಪನಿಯ ಸಹವರ್ತಿ ಸಂಸ್ಥೆಯಾಗಿತ್ತು. ಲೈಸನ್ಸ್ ನೀಡುವಂತೆ 29 ಅರ್ಜಿಗಳು ಸಲ್ಲಿಕೆಯಾಗಿದ್ದರೂ, ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಯ ಅರ್ಜಿಯನ್ನು ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ಅನುಮೋದನೆ ನೀಡಿದ್ದಾರೆ ಎಂಬ ಆರೋಪ ಕುಮಾರಸ್ವಾಮಿ ಮೇಲಿದೆ.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕೊನೆಯದಾಗಿ ಲೈಸನ್ಸಿಗೆ ಅರ್ಜಿ ಸಲ್ಲಿಸಿದರೂ ಕುಮಾರಸ್ವಾಮಿ ಅದೇ ಅರ್ಜಿಯನ್ನು ಪರಿಗಣಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಎಸ್ ಐಟಿಗೆ ವಹಿಸಿ ಕೊಡಲಾಗಿತ್ತು. 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್. ಸಂತೋಷ್ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿಯಲ್ಲಿನ ಉಲ್ಲೇಖ ಆಧರಿಸಿ ಲೋಕಾಯುಕ್ತದ ಎಸ್ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ. ಈ ಬಗ್ಗೆ ಅಕ್ರಮ ಗಣಿಗಾರಿಕೆ ಕುರಿತು ತನಿಖೆಗೆ ರಚನೆಯಾಗಿದ್ದ ಎಸ್ಐಟಿ 2015ರ ಜುಲೈ 27ರಂದು ಕುಮಾರಸ್ವಾಮಿ ಅವರಿಗೆ ನೋಟಿಸ್ ನೀಡಿತ್ತು. ಈ ಪ್ರಕರಣದಲ್ಲಿ 2015ರ ಆ. 3ರಂದು ವಿಶೇಷ ನ್ಯಾಯಲಯದಿಂದ ಕುಮಾರಸ್ವಾಮಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. 2015ರ ಆಗಸ್ಟ್ 5ರಂದು ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗಿದ್ದ ಕುಮಾರಸ್ವಾಮಿ ಅವರನ್ನು ತನಿಖಾಧಿಕಾರಿಗಳು ಬಂಧಿಸಿ ನಂತರ ಜಾಮೀನಿನ ಮೇಲೆ ಅದೇ ದಿನ ಬಿಡುಗಡೆ ಮಾಡಿದ್ದರು.

ಪ್ರಕರಣ ದಾಖಲಾದ ಸರಿ ಸುಮಾರು 9 ವರ್ಷಗಳ ನಂತರ ಕುಮಾರಸ್ವಾಮಿ ಅವರಿಗೆ ನ್ಯಾಯಾಲಯ ನೀಡಿದ್ದ ಜಾಮೀನು ರದ್ದುಪಡಿಸುವಂತೆ ಕೋರಿ ಎಸ್ಐಟಿ ಇತ್ತೀಚೆಗೆ ನ್ಯಾಯಲಯದ ಮೊರೆ ಹೋಗಿತ್ತು.

ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಚಂದ್ರಶೇಖರ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

ಕುಮಾರಸ್ವಾಮಿಯ ಕೆಂಗಣ್ಣಿಗೆ ಗುರಿಯಾಗಿದ್ದ ಎಡಿಜಿಪಿ:

ಗಣಿ ಹಗರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ಅನುಮತಿ ಕೋರಿ ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಚಂದ್ರಶೇಖರ್ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಕುಮಾರಸ್ವಾಮಿಯ ಆಕ್ರೋಶಕ್ಕೆ ಕಾರಣವಾಗಿತ್ತು. ಕುಮಾರಸ್ವಾಮಿ ಎಸ್ಐಟಿ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪ ಮಾಡಿದ್ದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕುಮಾರಸ್ವಾಮಿ, ಹಾಲಿ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಬಹಿರಂಗವಾಗಿಯೇ ಭ್ರಷ್ಟಾಚಾರ ಮತ್ತು ಸುಲಿಗೆಯ ಆರೋಪ ಹೊರಿಸಿದ್ದರು. ಅವರು ಮಹಡಿಗಳ ಕಟ್ಟಡ ಕಟ್ಟುತ್ತಿದ್ದಾರೆ, ಇನ್ಸ್ ಪೆಕ್ಟರ್ ನಿಂದ ಕೋಟ್ಯಂತರ ಹಣ ಕೇಳಿದ್ದಾರೆ ಎಂದು ಆರೋಪಿಸಿದ್ದರು. "ಆತ ಕ್ರಿಮಿನಲ್" ಎಂದೇ ಚಂದ್ರಶೇಖರ್ ವಿರುದ್ಧ ಹರಿಹಾಯ್ದಿದ್ದ ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಪತ್ರ ಬರೆದು ಹಿಮಾಚಲ ಪ್ರದೇಶ ಕ್ಯಾಡರ್ ನ ಚಂದ್ರಶೇಖರ್ ಅವರು ಕರ್ನಾಟಕದಲ್ಲೇ ಉಳಿದಿರುವ ಹಿಂದೆ ಏನೇನು ನಡೆದಿದೆ ಎಂದು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು.

ಕುಮಾರಸ್ವಾಮಿಯ ಟೀಕೆಗೆ ಪ್ರತಿಕ್ರಿಯಿಸಿದ್ದ ಎಡಿಜಿಪಿ ಎಸ್.ಐ.ಟಿಯ ಅಪರಾಧ ಸಂಖ್ಯೆ.16/14 ರಲ್ಲಿ ಆರೋಪಿಯಾಗಿರುವ ಎಚ್.ಡಿ.ಕುಮಾರಸ್ವಾಮಿ, ಪತ್ರಿಕಾಗೋಷ್ಠಿಯಲ್ಲಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಮತ್ತು ಬೆದರಿಕೆಗಳನ್ನು ಒಡ್ಡಿದ್ದಾರೆ ಎಂದು ಹೇಳಿದ್ದರು.

ಈ ಸಂಬಂಧ ಎಸ್.ಐ.ಟಿಯಲ್ಲಿರುವ ತಮ್ಮ ಸಹದ್ಯೋಗಿಗಳಿಗೆ ಪತ್ರ ಬರೆದಿರುವ ಅವರು, ಎಸ್‌ಐಟಿ ಸಕ್ಷಮ ಪ್ರಾಧಿಕಾರದ ಬಳಿ ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿತ್ತು. ಜಾಮೀನಿನ ಮೇಲಿರುವ ಈ ಆರೋಪಿ ಕುಮಾರಸ್ವಾಮಿ, ನಮ್ಮ ಕರ್ತವ್ಯಗಳನ್ನು ನಿರ್ವಹಿಸದಂತೆ ನಮ್ಮನ್ನು ತಡೆಯಲು ಈ ರೀತಿ ಆಪಾದನೆಗಳನ್ನು ಮಾಡಿದ್ದಾರೆ ಎಂದು ದೂರಿದ್ದರು. ನನ್ನ ಮೇಲೆ ದಾಳಿ ಮಾಡುವ ಮೂಲಕ ಎಸ್ಐಟಿ ಅಧಿಕಾರಿಗಳ ಮನಸ್ಸಿನಲ್ಲಿ ಭಯ ಮೂಡಿಸುವ ಉದ್ದೇಶ ಅವರಿಗಿರಬಹುದು. ಆದರೆ, ಒಬ್ಬ ಆರೋಪಿ ಆತ ಎಷ್ಟೇ ಉನ್ನತ ಹಾಗೂ ಪರಾಕ್ರಮಿಯಾಗಿದ್ದರೂ, ಆತ ಆರೋಪಿಯಷ್ಟೇ ಎಂದು ಚಂದ್ರಶೇಖರ್ ಹೇಳಿದ್ದರು.

ಇದಲ್ಲದೆ "ಹಂದಿಗಳೊಂದಿಗೆ ಎಂದಿಗೂ ಕುಸ್ತಿಯಾಡಬೇಡಿ. ನೀವಿಬ್ಬರೂ ಕೊಳಕಾಗುತ್ತೀರಿ ಮತ್ತು ಹಂದಿಯು ಅದನ್ನು ಇಷ್ಟಪಡುತ್ತದೆ"ಎಂಬ ಖ್ಯಾತ ಆಂಗ್ಲ ಸಾಹಿತಿ ಜಾರ್ಜ್ ಬರ್ನಾರ್ಡ್ ಷಾ ಅವರ ಪ್ರಸಿದ್ಧ ಸಾಲುಗಳನ್ನು ಉಲ್ಲೇಖಿಸಿ ಕುಮಾರಸ್ವಾಮಿ ಆರೋಪಗಳಿಗೆ ಚಂದ್ರಶೇಖರ್ ತಿರುಗೇಟು ನೀಡಿದ್ದರು.

ಎಡಿಜಿಪಿ ದೂರಿನಲ್ಲಿ ಏನಿತ್ತು?:

ಭ್ರಷ್ಟಾಚಾರ ಮತ್ತು ಸುಲಿಗೆ ಆರೋಪ ಮಾಡಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಕುಮಾರಸ್ವಾಮಿ ನನ್ನ ಹಾಗೂ ಕುಟುಂಬದ ವಿರುದ್ಧ ದುರುದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡಿ ಬೆದರಿಕೆ ಹಾಕಿದ್ದಾರೆ. ನನ್ನನ್ನು ಕರ್ನಾಟಕ ಕೇಡರ್ ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಕುಮಾರಸ್ವಾಮಿ ಮೌಖಿಕವಾಗಿ ಬೆದರಿಕೆ ಹಾಕಿದ್ದಾರೆ. ನಾನು ಬೌರಿಂಗ್ ಆಸ್ಪತ್ರೆಯಿಂದ ಸುಳ್ಳು ವೈದ್ಯಕೀಯ ದಾಖಲಾತಿಯನ್ನು ಪಡೆದು ಕರ್ನಾಟಕ ಕೇಡರ್ ನಲ್ಲಿ ಮುಂದುವರೆಯುತ್ತಿದ್ದೇನೆ, ಲಂಚ ತೆಗೆದುಕೊಂಡಿದ್ದೇನೆ ಎಂದು ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಸೆ.29ರಂದು ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ಮಾಡಿ, ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ. ನಂತರ ಕುಮಾರಸ್ವಾಮಿ ಆಪ್ತ ಸುರೇಶ್ ಬಾಬು ನನ್ನ ಮೇಲೆ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಪತ್ರ ನೀಡಿದ್ದಾರೆ. ಆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರನ್ನು ನೀಡಿದ್ದರು.

ಚಂದ್ರಶೇಖರ್ ನೀಡಿರುವ ದೂರನ್ನು ಸ್ವೀಕರಿಸಿರುವ ಸಂಜಯ ನಗರ ಪೊಲೀಸರು, ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಬಿ.ಎನ್.ಎಸ್.ಎಸ್.ಕಲಂ 174(1)ರ ಮೇರೆಗೆ ಠಾಣಾ ಎನ್.ಸಿ.ಆರ್. ಸಂಖ್ಯೆ 207/2024ರಲ್ಲಿ ದೂರು ದಾಖಲಿಸಿಕೊಂಡಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News