ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರಾ ಮಾಜಿ ಶಾಸಕ ಚಿಕ್ಕನಗೌಡರ್?

Update: 2023-11-05 15:56 GMT

ಬೆಂಗಳೂರು, ನ. 5: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಪರಿಣಾಮವಾಗಿ, ಅಸಮಾಧಾನಗೊಂಡಿರುವ ಉಭಯ ಪಕ್ಷಗಳ ನಾಯಕರನ್ನು ತಮ್ಮತ್ತ ಸೆಳೆಯಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಅದರ ಭಾಗವಾಗಿ, ಈಗಾಗಲೆ ಹಲವಾರು ಜೆಡಿಎಸ್, ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಇದೀಗ, ಮಾಜಿ ಸಿಎಂ ಯಡಿಯೂರಪ್ಪ ಅವರ ಸಂಬಂಧಿ ಬಿಜೆಪಿಯ ಮಾಜಿ ಶಾಸಕ ಚಿಕ್ಕನಗೌಡರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತರಲು ಪ್ರಯತ್ನ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚಿಕ್ಕನಗೌಡರ್ ಪಕ್ಷ ಸೇರ್ಪಡೆ ಸಂಬಂಧ ಮಾತುಕತೆ ನಡೆಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಚಿಕ್ಕನಗೌಡರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಪರಾಭವಗೊಂಡಿದ್ದರು.

ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಬಿಜೆಪಿಯಲ್ಲಿರುವ ಪ್ರಮುಖ ನಾಯಕರನ್ನು ಕಾಂಗ್ರೆಸ್ ಪಕ್ಷ ಸೇರಲು ಆಹ್ವಾನ ನೀಡಿರುವ ಜಗದೀಶ್ ಶೆಟ್ಟರ್, ಈಗಾಗಲೆ ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ಎಂ.ಪಿ.ಕುಮಾರಸ್ವಾಮಿಯನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಚಿಕ್ಕನಗೌಡರ್ ಅವರನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಲು ಸಿದ್ಧತೆ ನಡೆಸಿದ್ದಾರೆ. ಶೀಘ್ರವೆ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News