ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ವಾಪಾಸ್: ವಾದ ಮಂಡಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2023-12-15 14:56 GMT

ಬೆಂಗಳೂರು: ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವ ಸರಕಾರದ ಆದೇಶಕ್ಕೆ ಸಂಬಂಧಿಸಿದಂತೆ ವಾದ ಮಂಡಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ಈ ಆದೇಶ ನೀಡಿದೆ.

ಅರ್ಜಿದಾರರ ಪರ ವಕೀಲರು ಕೆಲವು ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಈ ಎಲ್ಲ ತೀರ್ಪುಗಳನ್ನು ಅಧ್ಯಯನ ಮಾಡಿ ಉತ್ತರಿಸಲು ಅಡ್ವೊಕೇಟ್ ಜನರಲ್ ಅವರು ಸಮಯ ಕೋರಿದರು. ಹೀಗಾಗಿ, 2024ರ ಜ.5ರಂದು ಅಡ್ವೋಕೇಟ್ ಜನರಲ್ ವಿಸ್ತ್ರತವಾಗಿ ಉತ್ತರ ನೀಡಬೇಕು ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ನ್ಯಾಯಪೀಠ ಅರ್ಜಿದಾರರಿಗೆ, ಸರಕಾರದ ಕ್ರಮದಿಂದ ನಿಮಗೇ ಏನು ತೊಂದರೆಯಾಗುತ್ತದೆ? ನಿಮ್ಮ ಯಾವ ಹಕ್ಕು ಉಲ್ಲಂಘನೆಯಾಗಿದೆ ಎಂದು ಅರ್ಜಿ ಸಲ್ಲಿಸಿದ್ದೀರಿ? ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸದೇ, ತಕರಾರು ಅರ್ಜಿ ಸಲ್ಲಿಸಿರುವುದು ಏಕೆ? ಎಂದು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್ ಪರ ವಕೀಲರ ವೆಂಕಟೇಶ್ ದಳವಾಯಿ, ಯಾವುದೇ ಪ್ರಕರಣದಲ್ಲಿ ವೈಯಕ್ತಿಕವಾಗಿ ತೊಂದರೆ ಅನುಭವಿಸದಿದ್ದರೂ, ಯಾರು ಬೇಕಾದರೂ ಕ್ರಿಮಿನಲ್ ತಕರಾರರು ಅರ್ಜಿ ಸಲ್ಲಿಸಬಹುದು ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ನ್ಯಾಯಪೀಠ ಸಮ್ಮತಿ ವ್ಯಕ್ತಪಡಿಸಿತು. ಬಳಿಕ ವಾದ ಮಂಡಿಸಲು ಸರಕಾರಕ್ಕೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣವೇನು?: 2019ರಲ್ಲಿ ಬಿಜೆಪಿ ಸರಕಾರವು ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಹಣಗಳಿಕೆ ಪ್ರಕರಣದ ತನಿಖೆ ಸಿಬಿಐಗೆ ಅನುಮತಿಸಿತ್ತು. ಇದನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು. ಅನಂತರ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ, ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದು, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನ.28ರಂದು ಹಿಂಪಡೆದಿತ್ತು.ಇದಕ್ಕೆ ಆಕ್ಷೇಪಿಸಿ ಬಿಜೆಪಿ ಶಾಸಕ ಯತ್ನಾಳ್ ಅವರು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪೂರಕ ಮಾಹಿತಿ : ಬಾರ್‌ ಆಂಡ್‌ ಬೆಂಚ್‌ 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News