ಮಹಿಳೆಯ ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Update: 2024-05-07 10:07 GMT

Photo: fb/prajwalrevanna


ಬೆಂಗಳೂರು: ಬೆಂಗಳೂರು: ವಿಶೇಷ ತನಿಖಾ ತಂಡದ (ಎಸ್ಐಟಿ) ವಶದಲ್ಲಿರುವ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ.

ಮೈಸೂರಿನ ಕೆ.ಆರ್.ನಗರದ ಮಹಿಳೆಯೊಬ್ಬರ ಅಪಹರಣ ಪ್ರಕರಣದ ಆರೋಪಿಯಾಗಿ ಸದ್ಯ ಎಸ್ಐಟಿ ಬಂಧನದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಜಾಮೀನು ಅರ್ಜಿಗೆ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಹೆ ಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಅರ್ಜಿದಾರ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ಆರೋಪಿಗೆ ಜಾಮೀನು ನೀಡಲು ಸಾಧ್ಯವಿರುವ ಕಾನೂನಿನ ಅಂಶಗಳು ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಪೂರ್ವ ನಿದರ್ಶನಗಳನ್ನು ನ್ಯಾಯಾಧೀಶರಿಗೆ ವಿವರಿಸಿದರು. ವಾದ ಆಲಿಸಿದ ನ್ಯಾಯಾಧೀಶರು, ‘ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇರುವಾಗ ಆತ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಬಹುದೇ ಹೇಗೆ ಎಂಬ ಬಗ್ಗೆ ಆಕ್ಷೇಪಣೆ ಸಲ್ಲಿಸಿʼ ಎಂದು ಎಸ್ಐಟಿಗೆ ಆದೇಶಿಸಿ ನೋಟಿಸ್ ಜಾರಿಗೊಳಿಸಿದರು.

 ಮೇ 8 ಬೆಳಗ್ಗೆ 11 ಗಂಟೆಗೆ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News