ವಕ್ಫ್ ತಿದ್ದುಪಡಿ ಕಾಯ್ದೆ ಸಾಧಕ-ಬಾಧಕ ಕುರಿತು ಝಮೀರ್ ಅಹ್ಮದ್ ನೇತೃತ್ವದಲ್ಲಿ ಸಭೆ
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ ವಕ್ಫ್ ತಿದ್ದುಪಡಿ ಕಾಯ್ದೆಯ ಸಾಧಕ-ಬಾಧಕ ಕುರಿತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಸೋಮವಾರ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ಜನಪ್ರತಿನಿಧಿಗಳು ಹಾಗೂ ಧರ್ಮ ಗುರುಗಳ ಸಭೆ ನಡೆಯಿತು.
ಅ.1ರಂದು ಸಂಸದೀಯ ಜಂಟಿ ಸಲಹಾ ಸಮಿತಿ ಅಭಿಪ್ರಾಯ ಸಂಗ್ರಹಣೆಗಾಗಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಡೆದ ಈ ಸಭೆಯಲ್ಲಿ ವಕ್ಫ್ ಕಾಯ್ದೆ ತಿದ್ದುಪಡಿಗೆ ಸಾಕಷ್ಟು ವಿರೋಧ ವ್ಯಕ್ತವಾಯಿತು. ಸಮಿತಿಯ ಮುಂದೆ ವಕ್ಫ್ ಬೋರ್ಡ್, ಅಲ್ಪಸಂಖ್ಯಾತರ ಆಯೋಗ, ಧರ್ಮ ಗುರುಗಳು ಸೇರಿದಂತೆ ಐದು ನಿಯೋಗಗಳೊಂದಿಗೆ ಆಕ್ಷೇಪಣೆ ಸೇರಿದಂತೆ ಅಭಿಪ್ರಾಯ ಮಂಡನೆ ಮಾಡಲು ನಿರ್ಧರಿಸಲಾಯಿತು.
ಸಭೆಯಲ್ಲಿ ಸಚಿವ ರಹೀಮ್ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಇಕ್ಬಾಲ್ ಹುಸೇನ್, ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಬಲ್ಕೀಸ್ ಬಾನು, ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್, ಮೌಲಾನಾ ಮಕ್ಸೂದ್ ಇಮ್ರಾನ್, ಮೌಲಾನಾ ಸೈಯದ್ ತನ್ವೀರ್ ಹಾಶ್ಮಿ, ಮೌಲಾನಾ ಝೈನುಲ್ ಆಬಿದೀನ್, ಮೌಲಾನಾ ಎನ್.ಕೆ.ಎಂ.ಶಾಫಿ ಸಅದಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.