ಕೋಲಾರ ಜಿಲ್ಲಾಧಿಕಾರಿಯಾಗಿ ಅಕ್ರಮ್ ಪಾಷಾ, ಕೊಡಗು ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ ನೇಮಕ

Update: 2023-06-27 10:56 GMT

ಅಕ್ರಮ್ ಪಾಷಾ | ವೆಂಕಟ್ ರಾಜಾ

ಬೆಂಗಳೂರು, ಜೂ.19: ರಾಜ್ಯ ಸರಕಾರವು 14 ಮಂದಿ ಐಎಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿದ್ದು, ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಜಾವೇದ್ ಅಖ್ತರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ)ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಹಾಗೂ ಕಾರ್ಮಿಕ ಇಲಾಖೆಯ ಆಯುಕ್ತರಾಗಿದ್ದ ಅಕ್ರಮ್ ಪಾಷಾ ಅವರನ್ನು ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿ ಬಿ.ಸಿ.ಸತೀಶ ಅವರನ್ನು ಸುವರ್ಣ ಆರೋಗ್ಯ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕರನ್ನಾಗಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ಗೋಪಾಲ ಕೃಷ್ಣ ಎಚ್.ಎನ್. ಅವರನ್ನು ಕರ್ನಾಟಕ ಮುನ್ಸಿಪಲ್ ಡೆಟಾ ಸೊಸೈಟಿಯ ಜಂಟಿ ನಿರ್ದೇಶಕ(ಸುಧಾರಣೆ) ಹಾಗೂ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಶಂಕರ ಎನ್. ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಗಂಗೂಬಾಯಿ ರಮೇಶ್ ಮನಕರ್ ಅವರನ್ನು ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಲತಾ ಆರ್.ಅವರನ್ನು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿಯಾಗಿ, ಕೋಲಾರ ಜಿಲ್ಲಾಧಿಕಾರಿಯಾಗಿದ್ದ ವೆಂಕಟ್ ರಾಜಾ ಅವರನ್ನು ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕಿ ಫೌಝಿಯಾ ತರನ್ನುಮ್ ಅವರನ್ನು ಕಲಬುರಗಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ನಾಗರಾಜ ಎನ್.ಎಂ. ಅವರನ್ನು ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಯೋಜನಾ ನಿರ್ದೇಶಕರಾಗಿ, ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ, ಪುನರ್ ನಿರ್ಮಾಣ ಹಾಗೂ ಭೂ ಸ್ವಾಧೀನದ ವ್ಯವಸ್ಥಾಪಕ ನಿರ್ದೇಶಕ ಭನ್ವಾರ್ ಸಿಂಗ್ ಮೀನಾ ಅವರನ್ನು ಕಲಬುರಗಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಬಿಬಿಎಂಪಿಯ ಮಹದೇವಪುರ ವಲಯದ ಜಂಟಿ ಆಯುಕ್ತ ಜಿ.ಲಿಂಗಮೂರ್ತಿ ಅವರನ್ನು ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ, ಕಲಬುರಗಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ದಿಲಿಪ್ ಬಡೋಲೆ ಅವರನ್ನು ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರನ್ನಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ನೋಂಗ್‍ಜೈ ಮುಹಮ್ಮದ್ ಅಲಿ ಅಕ್ರಮ್ ಶಾ ಅವರನ್ನು ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News