ಜಾರ್ಖಂಡ್ | ನ.26ರಂದು ಹೇಮಂತ್ ಸೊರೆನ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ: ವರದಿ
ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಹೇಮಂತ್ ಸೊರೆನ್ ನವೆಂಬರ್ 26ರಂದು ನಾಲ್ಕನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ಹಿನ್ನೆಲೆ ಸೊರೆನ್ ಅವರು ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಅವರನ್ನು ರವಿವಾರ ಸಂಜೆ 4 ಗಂಟೆಗೆ ಭೇಟಿ ಮಾಡಲಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಹೇಮಂತ್ ಸೊರೆನ್ ಪ್ರಮಾಣವಚನ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಪ್ರತಿಪಕ್ಷ INDIA ಮೈತ್ರಿಕೂಟದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ ನೇತೃತ್ವದ INDIA ಮೈತ್ರಿಕೂಟ 56 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸುವ ಮೂಲಕ 81 ಸ್ಥಾನಗಳಿರುವ ಜಾರ್ಖಂಡ್ ವಿಧಾನಸಭೆಯಲ್ಲಿ ಬಹುಮತ ಪಡೆದುಕೊಂಡಿದೆ.