ಲಂಚ ಮುಕ್ತ ರಾಜ್ಯ ನಮ್ಮ ಗುರಿ: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

Update: 2023-06-23 09:36 GMT

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್ ಲೈನ್ ಹಾಗೂ ಆಫ್ ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ವಿಚಾರವಾಗಿ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿಗಳ ಜತೆ ಮಾತನಾಡಿ ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ. ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ ಸಮಸ್ಯೆ ನೋಡುತ್ತಿದ್ದೀರಿ.ಈ ಯೋಜನೆಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200-300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಿಗೆ ರದ್ದಾಗುತ್ತದೆ, ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಹೇಳಿದರು.

ಈ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಲು ಹೋಗುವವರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ. ನಾವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಲಂಚ ಮುಕ್ತ ರಾಜ್ಯ ನಮ್ಮ ಗುರಿ ಎಂದು ತಿಳಿಸಿದರು.

ಬೊಮ್ಮಾಯಿ ಅವರು 2 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿ ಬೆಂಗಳೂರಿನ ಅಭಿವೃದ್ಧಿಗೆ ಕೆಲವು ಉತ್ತಮ ಯೋಜನೆ ಹಾಕಿಕೊಂಡಿದ್ದರು. ಆದರೆ ಅವರದ್ದು ಸಮ್ಮಿಶ್ರ ಸರ್ಕಾರವಾಗಿದ್ದ ಕಾರಣ ಆ ಯೋಜನೆಗಳನ್ನು ಜಾರಿ ಮಾಡಲು ಬಿಡಲಿಲ್ಲ. ಹೀಗಾಗಿ ಅವರನ್ನು ಭೇಟಿ ಮಾಡಿ ಅವರ ಸಲಹೆ, ಅಭಿಪ್ರಾಯ ಪಡೆಯಲಿದ್ದೇನೆ. ನಾನು ಈ ಹಿಂದೆ ಜಗದೀಶ್ ಶೆಟ್ಟರ್, ದೇವೇಗೌಡರು, ಎಸ್.ಎಂಕೃಷ್ಣ, ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇನೆ. ಕುಮಾರಸ್ವಾಮಿ ಅವರು ಇರಲಿಲ್ಲ. ಸಾಧ್ಯವಾದರೆ ಅವರನ್ನು ಭೇಟಿ ಮಾಡುತ್ತೇನೆ. ಎಲ್ಲರ ಅನುಭವ ಅವರ ವಿಚಾರಧಾರೆ ಕೇಳಿ ಪಡೆಯುತ್ತೇನೆ. ಇದರಲ್ಲಿ ರಾಜಕಾರಣ ಯಾಕೆ? ಎಂದು ಕೇಳಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News