ಕಡಲ ಕೊರೆತ ತಡೆಗೆ ಶಾಶ್ವತ ಪರಿಹಾರ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Update: 2023-07-08 11:19 GMT

ಉಡುಪಿ: ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇಂದು ಪಡುಬಿದ್ರೆಯ ಕಾಡಿ ಪಟ್ಣದಲ್ಲಿ , ಸಮುದ್ರ ಕೊರೆತ ಪ್ರದೇಶ ವೀಕ್ಷಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಸಮುದ್ರ ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಈ ಬಾರಿ ತಡವಾಗಿ ಮಳೆ ಆರಂಭಗೊಂಡಿದ್ದರೂ ಸಹ ಪ್ರಾಕೃತಿಕ ವಿಕೋಪದಿಂದ ಇದುವರೆಗೆ ಏಳು ಮಂದಿ ಮೃತಪಟ್ಟಿದ್ದು, ಇವರ ಕುಟುಂಬದವರಿಗೆ ತಲಾ ರೂ. ಐದು ಲಕ್ಷಗಳ ಪರಿಹಾರವನ್ನು ವಿತರಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ಜೀವ ಹಾನಿ ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಮಳೆಯಿಂದ ಮಾನವ ಜೀವ ಹಾನಿ, ಮನೆ ಹಾನಿ, ಜಾನುವಾರು ಹಾನಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು ಜಿಲ್ಲೆಯಲ್ಲಿ ಕಾಲು ಸಂಕಗಳ ನಿರ್ಮಾಣ ಮತ್ತು ಕಿಂಡಿ ಅಣೆಕಟ್ಟು ನಿರ್ಮಾಣದ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ತಹಸೀಲ್ದಾರ್ ಶ್ರೀನಿವಾಸ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News