ಸರಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳುತ್ತೇವೆ: ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Update: 2023-11-18 13:35 GMT

ಬೆಂಗಳೂರು: ‘ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ನೇತೃತ್ವದ ಸರಕಾರವು ಬಡಜನರ, ರೈತರ ವಿರೋಧಿಯಾಗಿದೆʼ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ಶನಿವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಇದು ರೈತವಿರೋಧಿ ಸರಕಾರ. ಬಡವರು, ರೈತರು ಈ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಬರಗಾಲದ ಕುರಿತು ನಿರ್ಲಕ್ಷ್ಯ ವಹಿಸಿದ ಕಾಂಗ್ರೆಸ್ ಸರಕಾರವನ್ನು ಎಚ್ಚರಿಸುವ ಕಾರ್ಯವನ್ನು ನಾನು ಮತ್ತು ವಿಪಕ್ಷ ನಾಯಕ ಆರ್.ಅಶೋಕ್, ನಮ್ಮೆಲ್ಲ ಶಾಸಕರು, ಪರಿಷತ್ ಸದಸ್ಯರು, ಹಿರಿಯ ನಾಯಕರು ಒಗ್ಗಟ್ಟಾಗಿ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ಸರಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳುತ್ತೇವೆ’ ಎಂದು ಎಚ್ಚರಿಸಿದರು.

‘ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ದಿಕ್ಕನ್ನು ಬದಲಾಯಿಸುವ ಮಹತ್ವದ ಚುನಾವಣೆ. ಅದು ರಾಜ್ಯದ ರಾಜಕೀಯ ದಿಕ್ಕನ್ನು ಬದಲಾಯಿಸಲಿದೆ. ರಾಜ್ಯ ಮತ್ತು ದೇಶದ ಭವಿಷ್ಯದ ದೃಷ್ಟಿಯಿಂದ ಲೋಕಸಭಾ ಚುನಾವಣೆಯಲ್ಲಿ ನಮ್ಮ ಮೋದಿಜೀ 3ನೇ ಬಾರಿಗೆ ದೇಶದ ಪ್ರಧಾನಿ ಆಗಬೇಕು. ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಮೂಲಕ ಸರಕಾರಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ ಎಂದು ಅವರು ತಿಳಿಸಿದರು.

ಇದಕ್ಕಾಗಿ ನಾವು, ನೀವೆಲ್ಲರೂ ಜೊತೆಗೂಡಿ ಪಕ್ಷ ಬಲಪಡಿಸುವ ಕಾರ್ಯ ಮಾಡೋಣ. ಮೋದಿಜೀ ಅವರ ಕೈಗಳನ್ನು ಬಲಪಡಿಸೋಣ ಎಂದು ವಿನಂತಿಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಹಿರಿಯ ಮುಖಂಡರಾದ ಆರ್.ಅಶೋಕ್ ಅವರಿಗೆ ಅಭಿನಂದನೆಗಳು ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News