ಮಾರ್ಚ್ 17ಕ್ಕೆ ಜಾತಿ ಗಣತಿ ಬಿಡುಗಡೆ ಸಾಧ್ಯತೆ : ರಾಜಣ್ಣ
Update: 2025-02-16 12:47 IST

ತುಮಕೂರು : ಚಾಮರಾಜನಗರದಲ್ಲಿ ಮಾ.17ರಂದು ನಡೆಯುವ ಸಚಿವ ಸಂಪುಟದ ಸಭೆಯಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಮಾಡುವ ಸಂಭವವಿದೆ. ಜಾತಿ ಗಣತಿಯ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿ, ನ್ಯಾ.ನಾಗಮೋಹನ್ ದಾಸ್ ವರದಿಯನ್ನು ಆಧರಿಸಿ, ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಒಳಮೀಸಲಾತಿ ಜಾರಿಗೆ ತರಲಿದ್ದೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಪ್ರಣಾಳಿಕೆಯಲ್ಲಿ ಒಪ್ಪಿಕೊಂಡಿರುವಂತೆ ಒಳ ಮೀಸಲಾತಿ ಜಾರಿಗೆ ತರಲು ಸಿದ್ದರಿದ್ದೇವೆ ಎಂದು ಹೇಳಿದ್ದಾರೆ.
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್, ನಾನು ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರ ವಿರೋಧ ಇದೆ. ಸಂಪುಟ ಸಭೆಯಲ್ಲಿ ಚರ್ಚೆ ಮಾಡುವ ಸಂದರ್ಭದಲ್ಲೂ ಪರಮೇಶ್ವರ್ ಅವರು ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದರು ಎಂದ ಸಚಿವರು, ಯಾವುದೇ ಕಾರಣಕ್ಕೂ ನೀರು ಹರಿಯಲು ಬಿಡುವುದಿಲ್ಲ ಎಂದು ಹೇಳಿದರು.