ಎಸೆಸೆಲ್ಸಿಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 14,153 ಪರೀಕ್ಷಾರ್ಥಿಗಳು: ಡಿಸಿ ವಿದ್ಯಾಕುಮಾರಿ

Update: 2025-03-19 20:00 IST
ಎಸೆಸೆಲ್ಸಿಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 14,153 ಪರೀಕ್ಷಾರ್ಥಿಗಳು: ಡಿಸಿ ವಿದ್ಯಾಕುಮಾರಿ
  • whatsapp icon

ಉಡುಪಿ, ಮಾ.18: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಗಳು ಮಾ.21ರಿಂದ ಎ.4ರವರೆಗೆ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 14,153 ಪರೀಕ್ಷಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಮಾಹಿತಿಗಳನ್ನು ಹಂಚಿಕೊಂಡರು.

ಜಿಲ್ಲೆಯಲ್ಲಿ 115 ಸರಕಾರಿ, 68 ಅನುದಾನಿತ ಹಾಗೂ 89 ಅನುದಾನ ರಹಿತ ಸೇರಿದಂತೆ ಒಟ್ಟು 272 ಪ್ರೌಢಶಾಲೆಗಳಿದ್ದು, ಇವುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ಇಲ್ಲಿನ 590 ಪರೀಕ್ಷಾ ಕೊಠಡಿಗಳಲ್ಲಿ ಇವರು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಜಿಲ್ಲೆಯಲ್ಲಿ 7152 ಬಾಲಕರು ಹಾಗೂ 6646 ಬಾಲಕಿಯರು ಸೇರಿದಂತೆ ಒಟ್ಟು 13,798 ಮಂದಿ ಹೊಸ ದಾಗಿ ಪರೀಕ್ಷೆ ಬರೆಯಲಿದ್ದಾರೆ. ಉಳಿದಂತೆ 215 ಮಂದಿ (159 ಬಾಲಕರು, 56 ಬಾಲಕಿಯರು) ಖಾಸಗಿ ಅಭ್ಯರ್ಥಿ ಗಳು, 44 ಮಂದಿ (30+14) ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 96 (70+26) ರೆಗ್ಯೂಲರ್ ಪುನರಾವರ್ತಿತ ಅಭ್ಯರ್ಥಿಗಳು ಸಹ ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ.

ಹೀಗಾಗಿ ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಈ ಬಾರಿ 7411 ವಿದ್ಯಾರ್ಥಿಗಳು ಹಾಗೂ 6742 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 14153 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಉಡುಪಿಯಲ್ಲಿ 15, ಬ್ರಹ್ಮಾವರದಲ್ಲಿ 11, ಕಾರ್ಕಳದಲ್ಲಿ 9, ಬೈಂದೂರು ಮತ್ತು ಕುಂದಾಪುರದಲ್ಲಿ ತಲಾ 8 ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರ ಗಳ 590 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ನಿರ್ದೇಶನದಂತೆ ಪರೀಕ್ಷಾ ಅವ್ಯವಹಾರ ತಡೆ ಯಲು ಎಲ್ಲಾ ಪರೀಕ್ಷಾ ಕೇಂದ್ರ ಹಾಗೂ ಕೊಠಡಿಗಳಲ್ಲಿ ಸಿಸಿಟಿವಿಯನ್ನು ಅಳವಡಿಸಲಾಗಿದೆ. ಇದರ ವೆಬ್‌ಕಾಸ್ಟಿಂಗ್‌ಗಾಗಿ ಒಟ್ಟು 12 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯುಕ್ತಿಗೊಳಿಸಲಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ತಿಳಿಸಿದರು.

ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಕ್ಲಸ್ಟರ್ ಸಹಿತ ಪರೀಕ್ಷಾ ಕೇಂದ್ರಗಳ ಸಂಖ್ಯೆ 17 ಆದರೆ, ಕ್ಲಸ್ಟರ್ ರಹಿತ ಪರೀಕ್ಷಾ ಕೇಂದ್ರಗಳ ಸಂಖ್ಯೆ 34. ಎಲ್ಲಾ 51 ಪರೀಕ್ಷಾ ಕೇಂದ್ರಗಳಲ್ಲೂ ಸಮರ್ಪಕ ಪೀಠೋಪ ಕರಣ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷೆಯನ್ನು ಯಾವುದೇ ಅಕ್ರಮಗಳಿಲ್ಲದೇ, ಶಾಂತಿಯುತ ವಾಗಿ ನಡೆಸಲು ಒಟ್ಟು 1013 ಪರೀಕ್ಷಾ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಇವರಲ್ಲಿ ಕೊಠಡಿ ಮೇಲ್ವಿಚಾರಕರು, ಜಾಗೃತಿ ದಳದ ಅಧಿಕಾರಿಗಳು ಸೇರಿದ್ದಾರೆ ಎಂದರು.

ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯಲು ಜಿಲ್ಲಾ ಮಟ್ಟದ ಮೂರು ತಂಡಗಳು ಹಾಗೂ ವಲಯ ಮಟ್ಟ ದಲ್ಲಿ ವಿಚಕ್ಷಣಾ ದಳವನ್ನು ಪ್ರತಿ ತಾಲೂಕಿಗೆ ಒಂದರಂತೆ ನೇಮಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರದ 200ಮೀ. ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.

ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆ: ಪ್ರಶ್ನೆ ಪತ್ರಿಕೆಗಳನ್ನು ಸಂರಕ್ಷಿಸಿಡಲು ಉಡುಪಿಯ ಜಿಲ್ಲಾ ಖಜಾನೆ ಹಾಗೂ 2 ತಾಲೂಕು ಖಜಾನೆಗಳಲ್ಲಿ ಬಿಗಿ ಪೊಲೀಸ್ ಪಹರೆಯೊಂದಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ದಿನ ದಂದು ಆಯಾ ವಿಷಯಗಳ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಮತ್ತು ಉತ್ತರ ಪತ್ರಿಕೆ ಗಳನ್ನು ಪಡೆಯಲು ಜಿಲ್ಲೆಯಲ್ಲಿ ಒಟ್ಟು 22 ಮಾರ್ಗಾಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಎಲ್ಲಾ 51 ಪರೀಕ್ಷಾ ಕೇಂದ್ರಗಳಲ್ಲೂ ವಿದ್ಯಾರ್ಥಿಗಳಿಗೆ ಓಆರ್‌ಎಸ್ ಶುದ್ಧ ಕುಡಿಯುವ ನೀರು ಹಾಗೂ ಪ್ರಥಮ ಚಿಕಿತ್ಸೆಗಾಗಿ ಆರೋಗ್ಯ ಕಾರ್ಯಕರ್ತ ರನ್ನು ನೇಮಿಸಲಾಗಿದೆ. ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಹಾಗೂ ಪರೀಕ್ಷೆ ಮುಗಿದ ಬಳಿಕ ಎಲ್ಲಾ ಕೇಂದ್ರಗಳಲ್ಲೂ ಬಿಸಿಯೂಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಕೆಎಸ್ಸಾರ್ಟಿಸಿಯಲ್ಲಿ ಉಚಿತ ಪ್ರಯಾಣ: ಈ ಬಾರಿ ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅವರ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಅವರು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಬೇಕು ಎಂದೂ ಡಾ.ವಿದ್ಯಾ ಕುಮಾರಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಹಾಗೂ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

ಈ ಬಾರಿಯ ಪರೀಕ್ಷಾ ವೇಳಾಪಟ್ಟಿ

ಮಾ.21 ಶುಕ್ರವಾರ ಪ್ರಥಮ ಭಾಷೆ

ಮಾ.24 ಸೋಮವಾರ ಗಣಿತ

ಮಾ.26 ಬುಧವಾರ ದ್ವಿತೀಯ ಭಾಷೆ

ಮಾ.29 ಶನಿವಾರ ಸಮಾಜ ವಿಜ್ಞಾನ

ಎಪ್ರಿಲ್‌2 ಬುಧವಾರ ವಿಜ್ಞಾನ

ಎಪ್ರಿಲ್‌4 ಶುಕ್ರವಾರ ತೃತೀಯ ಭಾಷೆ 



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News