ಕೋಡಿ ಕಡಲತೀರದ 26.5 ಎಕರೆ ಜಾಗ ಪ್ರವಾಸೋದ್ಯಮ ಇಲಾಖೆಗೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

Update: 2024-11-15 14:44 GMT

ಮಣಿಪಾಲ, ನ.15: ಕುಂದಾಪುರ ತಾಲೂಕಿನ ಪ್ರವಾಸಿ ತಾಣಗಳಲ್ಲಿ ಒಂದಾದ ಕೋಡಿ ಕಡಲ ತೀರದ ಸರ್ವೇ ನಂಬರ್ 310ರಲ್ಲಿ 26.50 ಎಕರೆ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸುವಂತೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕೋಡಿ ಕಡಲ ಕಿನಾರೆ ಪ್ರದೇಶವು ಪ್ರವಾಸೋದ್ಯಮಕ್ಕೆ ಪೂರಕವಾಗಿದ್ದು, ಡಾಲ್ಫಿನ್‌ಗಳು ಕಂಡುಬರುವ ಉಡುಪಿ ಜಿಲ್ಲೆಯ ಏಕೈಕ ಪ್ರವಾಸಿ ತಾಣ ವಾಗಿದೆ. ಇಲ್ಲಿ ಪ್ರವಾಸಿ ಚಟುವಟಿಕೆಗಳನ್ನು ಆಧುನಿಕ ಶೈಲಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದವರು ತಿಳಿಸಿದರು.

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ ಅನುಕೂಲತೆಗಳನ್ನು ಹೆಚ್ಚಿಸುವ ಮೂಲಕ ಸ್ವಾಗತಾರ್ಹ ವಾತಾವರಣ ವನ್ನು ಕಲ್ಪಿಸಬೇಕು. ಈ ಮೂಲಕ ಪ್ರವಾಸೋದ್ಯಮ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚಿಸಬೇಕು ಎಂದವರು ಸಲಹೆ ನೀಡಿದರು.

ಜಿಲ್ಲೆಗೆ ಕಳೆದ ಸಾಲಿನಲ್ಲಿ 4 ಕೋಟಿಗೂ ಹೆಚ್ಚು ಪ್ರವಾಸಿಗರು ಬಂದು ಹೋಗಿದ್ದಾರೆ. ಈ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಹೊರಗಿನಿಂದ ಬರುವ ಪ್ರವಾಸಿಗರಿಗೆ ಅನುಕೂಲವಾಗುವ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಪ್ರವಾಸಿ ತಾಣಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದರು.

ಕಡಲತೀರಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು, ಜಲಕ್ರೀಡೆ, ಬೋಟಿಂಗ್ ಸೇರಿದಂತೆ ವಿವಿಧ ಚಟುವಟಿಕೆ ಗಳನ್ನು ಕೈಗೊಳ್ಳು ವಾಗ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು. ಎಲ್ಲಾ ಚಟುವಟಿಕೆಗಳನ್ನು ಪ್ರಾರಂಭಿ ಸುವ ಮುನ್ನ ಸೂಕ್ತ ಪ್ರಾಧಿಕಾರಗಳಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದರು.

ತ್ರಾಸಿಯಿಂದ ಮರವಂತೆ ಬೀಚ್ ರಸ್ತೆಯುದ್ದಕ್ಕೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ರಸ್ತೆ ಬದಿಯ ಸೈಡ್ ಗೈಡ್ ರೈಲ್ ಅನ್ನು ಹಾಗೂ ಬ್ಯಾರಿಕೇಡ್‌ಗಳನ್ನು ನಿರ್ಮಿಸಬೇಕು. ರಸ್ತೆಯಲ್ಲಿ ಸಂಚರಿಸುವವರು ಬೀಚ್‌ನ ಆಕರ್ಷಣೆಗೆ ಸಿಕ್ಕಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ಹೋಗುತ್ತಾರೆ. ಇದರಿಂದಾಗಿಯೇ ಅಪಘಾತಗಳಾಗುವ ಸಾಧ್ಯತೆಗಳಿವೆ. ಇವುಗಳಿಗೆ ಕಡಿವಾಣ ಹಾಕಬೇಕಿದೆ ಎಂದರು.

ಪಡುಕೆರೆ ಬೀಚ್ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆ ಉತ್ತೇಜಿಸಲು ಕೆಲವೊಂದು ಹೋಮ್‌ಸ್ಟೇಗಳಿಗೆ ಅನುಮತಿ ನೀಡಲಾಗಿದೆ. ಇವುಗಳ ಬಗ್ಗೆ ಸ್ಥಳೀಯ ಸಂಘ-ಸಂಸ್ಥೆಗಳು ಆಕ್ಷೇಪಣೆಗಳನ್ನು ಸಹ ಸಲ್ಲಿಸಿವೆ. ಈ ಬಗ್ಗೆ ಪರಿಶೀಲಿಸಿ, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News