ಉಡುಪಿ: ಎ.3ರಂದು ಜಯಪ್ರಕಾಶ್ ಹೆಗ್ಡೆ, ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

Update: 2024-04-02 13:44 GMT

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹಾಗೂ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಎ.3ರಂದು ಪೂರ್ವಾಹ್ನ 11:00ರಿಂದ 12:00ಗಂಟೆ ನಡುವೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಬೆಳಗ್ಗೆ 9:00ಗಂಟೆಗೆ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಹಿರಿಯ ನಾಯಕರು, ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆಯಲಿದೆ.

ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಮೈಸೂರು ವಿಭಾಗದ ಉಸ್ತುವಾರಿ ರೋಝಿ ಜಾನ್, ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಮಂಜುನಾಥ ಭಂಡಾರಿ, ಮಾಜಿ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಬಿ.ಎಂ.ಸುಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿರುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.

ಯತ್ನಾಳ್, ಸಿ.ಟಿ.ರವಿ ಭಾಗಿ: ಮತ್ತೊಂದೆಡೆ ಕೋಟ ಅವರ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕಡಿಯಾಳಿಯಲ್ಲಿ ರುವ ಜಿಲ್ಲಾ ಬಿಜೆಪಿ ಕಚೇರಿ ಸಮೀಪದ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಇದರಲ್ಲಿ ಪಕ್ಷದ ಹಿರಿಯ ನಾಯಕರಾದ ಮಾಜಿ ಕೇಂದ್ರ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್, ಸಿ.ಟಿ.ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್, ಜಿಲ್ಲೆಯ ಶಾಸಕರಾದ ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ ಕೊಡ್ಗಿ, ಗುರುರಾಜ್ ಗಂಟಿಹೊಳೆ ಸಹಿತ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News