ಜ.10ಕ್ಕೆ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತಗೊಳ್ಳಲಿ: ಉಡುಪಿ ಡಿಸಿ ವಿದ್ಯಾಕುಮಾರಿ

Update: 2024-12-18 14:39 GMT

ಉಡುಪಿ: ಕಳೆದ ಹಲವು ವರ್ಷಗಳಿಂದ ನಗರದ ಸಮಸ್ಯೆ ಎನಿಸಿಕೊಂಡಿರುವ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಯನ್ನು ಮುಂದಿನ ಜ.10ರೊಳಗೆ ಪೂರ್ಣಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ರಾಷ್ಟ್ರೀಯ ಹೆದ್ದಾರಿ ನಿಗಮ, ರೈಲ್ವೆ ಇಲಾಖೆ ಹಾಗೂ ಗುತ್ತಿಗೆದಾರ ರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾ ನಡೆದ ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಬಹುಕಾಲದಿಂದ ಬಾಕಿ ಉಳಿದಿರುವ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸಲು ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಲು 2018 ರಿಂದಲೇ ಪತ್ರ ವ್ಯವಹಾರಗಳು ನಡೆದಿದ್ದವು. ಮೂರು ವರ್ಷಗಳ ಹಿಂದೆಯೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಸಹ ನಿಗದಿತ ಕಾಲಾವಧಿಯಲ್ಲಿ ಕಾಮಗಾರಿ ಯನ್ನು ಪೂರ್ಣಗೊಳಿಸದೇ ಇರುವುದರಿಂದ ಸಾರ್ವಜನಿಕರಿಗೆ ಭಾರೀ ಸಮಸ್ಯೆ ಉಂಟಾಗಿತ್ತು. ವಾಹನಗಳ ಸಂಚಾರಕ್ಕೆ ವ್ಯತ್ಯಯ ಉಂಟಾಗಿ ಪ್ರತೀ ದಿನವೂ ಜಿಲ್ಲಾಡಳಿತಕ್ಕೆ ದೂರುಗಳು ಕೇಳಿ ಬರುತ್ತಿದ್ದವು ಎಂದವರು ಹೇಳಿದರು.

ನಿಧಾನಗತಿಯ ಕಾಮಗಾರಿಯಿಂದಾಗಿ ಈ ಪ್ರದೇಶದಲ್ಲಿ ಸಾಕಷ್ಟು ಅಪಘಾತಗಳು ನಡೆದಿದ್ದು, ಹಲವರು ಪ್ರಾಣಕಳೆದು ಕೊಳ್ಳುವಂತಾಗಿತ್ತು. ಇವಕ್ಕೆಲ್ಲಾ ಅಭಿಯಂತರರು ಹಾಗೂ ಗುತ್ತಿಗೆದಾರರೇ ಕಾರಣ ಎಂದು ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಪ್ರತೀ ವಾರಕ್ಕೊಮ್ಮೆ ಕಾಮಗಾರಿ ಪ್ರಕ್ರಿಯೆಯ ಮಾಹಿತಿಯನ್ನು ತಮಗೆ ನೀಡುವಂತೆ ಸೂಚನೆ ನೀಡಿದರು.

ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು ಈಗಾಗಲೇ ರೈಲ್ವೆ ಇಲಾಖೆ ಯಿಂದ ಅನುಮತಿಯನ್ನು ಪಡೆಯಲಾಗಿದೆ. ಸಿವಿಲ್ ಕಾಮಗಾರಿ ಹಾಗೂ ಕಬ್ಬಿಣದ ಬ್ರಿಡ್ಜ್‌ನ ಜೋಡಣೆ ಕಾಮಗಾರಿಯನ್ನು ಹಗಲು ಹಾಗೂ ರಾತ್ರಿ ಎರಡು ಪಾಳಿಯಲ್ಲೂ ಸಾಕಷ್ಟು ಕಾರ್ಮಿಕರನ್ನು ನಿಯೋಜಿಸಿ, ಗುಣಮಟ್ಟದ ಕಾಮಗಾರಿಯೊಂದಿಗೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.

ರೈಲ್ವೆ ಮೇಲ್ಸೆತುವೆ ಕಾಮಗಾರಿಯನ್ನು ಕೈಗೊಳ್ಳುವಾಗ ಸುರಕ್ಷತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ರೈಲು ಸಾಗಾಣಿಕೆಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ನಿಗಾ ವಹಿಸಬೇಕು ಎಂದ ಅವರು, ಜನವರಿ 7ರ ಒಳಗೆ ಪೂರ್ಣ ಪ್ರಮಾಣದಲ್ಲಿ ಕಾಮಗಾರಿಯನ್ನು ಮುಗಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಕೊಂಕಣ ರೈಲ್ವೆಯ ಸೀನಿಯರ್ ಇಂಜಿನಿಯರ್ ಗೋಪಾಲ ಕೃಷ್ಣ, ಶೃಂಗೇರಿ- ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News