ಜ.25ರಂದು ಮತದಾರರ ದಿನಾಚರಣೆ: ಪೂರ್ವಭಾವಿ ಸಭೆ

Update: 2025-01-04 14:57 GMT

ಉಡುಪಿ, ಜ.4: ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಯನ್ನು ಜನವರಿ 25ರಂದು ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶನಿವಾರ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜ.25ರಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.

ಖ್ಯಾತ ಉಪನ್ಯಾಸಕರಿಂದ ಮತದಾರರ ದಿನಾಚರಣೆ ಕುರಿತು ಉಪನ್ಯಾಸ ಸಹ ನಡೆಯಲಿದ್ದು, ಯುವ ಮತದಾರರಿಗೆ ಹೊಸ ಎಪಿಕ್ ಕಾರ್ಡ್‌ಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುವುದು. ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವುದರೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸ ಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ ಹಾಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ, ಫ್ಲೈಯಿಂಗ್ ಸ್ಕ್ವಾಡ್ ಗಳಿಗೆ, ಸೆಕ್ಟರ್ ಅಧಿಕಾರಿಗಳು ಹಾಗೂ ಇಎಲ್‌ಸಿಗಳಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್‌ಪಿ ಸಿದ್ಧಲಿಂಗಪ್ಪ, ಸಹಾಯಕ ಕಮಿಷನರ್ ಮಹೇಶ್ಚಂದ್ರ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಡಯಟ್ ನ ಹಿರಿಯ ಉಪನ್ಯಾಸಕ ಡಾ. ಅಶೋಕ್ ಕಾಮತ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News