ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಆರೋಗ್ಯಪೂರ್ಣ ಬದುಕು: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ
ಉಡುಪಿ, ಆ.12: ಮಾದಕ ವಸ್ತುಗಳು ಸೇರಿದಂತೆ ಎಲ್ಲಾ ರೀತಿಯ ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಯುವಜನತೆ ಉತ್ತಮವಾದ ಆರೋಗ್ಯವನ್ನು ಹೊಂದಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.
ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಸೋಮವಾರ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ನಿರ್ದೇಶನದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್ ಕ್ರಾಸ್, ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಶಾಂತಿಗಾಗಿ ಜಿನೇವಾ ಒಪ್ಪಂದಗಳ ಸ್ಮರಣೆ ಮತ್ತು ನಶಾಮುಕ್ತ ಭಾರತ ಅಭಿಯಾನದ ಅಂಗವಾಗಿ ನಡೆದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ನಮ್ಮ ದೇಶದಲ್ಲಿ ಅಪಾರವಾದ ಯುವಶಕ್ತಿಯಿದೆ. ಆದರೆ ಯುವ ಶಕ್ತಿಯ ಸದ್ಬಳಕೆಗೆ ಮಾದಕ ವ್ಯಸನ ಒಂದು ಸವಾಲಾ ಗಿದೆ. ಇದರಿಂದ ಮಾದಕ ವ್ಯಸನದ ವಿರುದ್ಧದ ಆಂದೋಲನವನ್ನು ಪ್ರತಿಯೊಬ್ಬ ವ್ಯಕ್ತಿಯ ಅಂತರಂಗಕ್ಕೂ ಮುಟ್ಟಿಸಬೇಕಾ ಗಿದೆ. ಇದು ಈ ಅಭಿಯಾನದ ಮುಖ್ಯ ಉದ್ದೇಶ ಎಂದರು.
ಯುವ ಪೀಳಿಗೆಯು ದುಶ್ಚಟಗಳಿಗೆ ಒಳಗಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ನಶಾ ಮುಕ್ತ ಭಾರತ ಅಭಿಯಾನ ವನ್ನು ಹಮ್ಮಿಕೊಂಡಿದ್ದು, ಯುವಜನತೆ ಮಾದಕವಸ್ತುಗಳ ವ್ಯಸನದ ದುಷ್ಪರಿಣಾಮಗಳನ್ನು ಅರಿತು ಮಾದಕ ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ. ಗಣನಾಥ್ ಎಕ್ಕಾರು ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಗೆ ರಾಜ್ಯ ಶಾಖೆ ನೀಡಿದ ಮೊಬೈಲ್ ಆರೋಗ್ಯ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ದಲಿಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಕಲಚೇತನ ಕಲ್ಯಾಣಾಧಿಕಾರಿ ರತ್ನಾ, ರೆಡ್‌ಕ್ರಾಸ್‌ನ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ, ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ್, ಗೌರವ ಖಜಾಂಜಿ ರಮಾದೇವಿ, ನೋಡೆಲ್ ಅಧಿಕಾರಿ ಜಯಶ್ರೀ ಹಾಗೂ ಇತರರು ಉಪಸ್ಥಿತರಿದ್ದರು.
ಭಾರತೀಯ ರೆಡ್‌ಕ್ರಾಸ್‌ನ ಜಿಲ್ಲಾ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಸ್ವಾಗತಿಸಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ನಿರೂಪಿಸಿ ವಂದಿಸಿದರು. ಜಾಥಾದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ 1000ಕ್ಕೂ ಅಧಿಕ ವಿದ್ಯಾರ್ಥಿಗಳು, ರೆಡ್‌ಕ್ರಾಸ್ ಹಾಗೂ ಎನ್ನೆಸ್ಸೆಸ್ ವಿದ್ಯಾರ್ಥಿಗಳು, ಅಧಿಕಾರಿಗಳು ಭಾಗವಹಿಸಿದ್ದರು.