ಕಡಲು ಕೊರೆತಕ್ಕೆ ಶಾಶ್ವತ ಪರಿಹಾರ; ಕ್ರಿಯಾಯೋಜನೆಗೆ ಅಧಿಕಾರಿಗಳಿಗೆ ಸೂಚನೆ

Update: 2023-08-01 14:04 GMT

ಉಡುಪಿ, ಆ.1: ಜಿಲ್ಲೆಯಲ್ಲಿರುವ 98 ಕಿ.ಮೀ. ಉದ್ದದ ಕಡಲು ತೀರದಲ್ಲಿ ಮಳೆಗಾಲದ ವೇಳೆ ಕಾಣಿಸಿಕೊಳ್ಳುವ ಕಡಲು ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಿಯಾಯೋಜನೆಯನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗುವುದು. ಇದಕ್ಕೆ ಎಷ್ಟು ಹಣ ಬೇಕು ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅನುದಾನ ಹೊಂದಾಣಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಪಡುಬಿದ್ರೆ ಬೀಚ್‌ನಲ್ಲಿ ಇತ್ತೀಚೆಗೆ ಮಳೆಗಾಲದಲ್ಲಿ ಸಂಭವಿಸಿದ ಕಡಲು ಕೊರೆತವನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.

ಕಡಲು ಕೊರೆತದ ಶಾಶ್ವತ ತಡೆಗೆ ಕ್ರಿಯಾಯೋಜನೆಯನ್ನು ರೂಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಅವರು ಮಳೆಗಾಲದ ವೇಳೆ ಕಡಲು ಕೊರೆತ ಎಂಬುದು ಕರಾವಳಿ ತೀರದಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ದೀಘಕಾಲದ ಹಾಗೂ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಇಲ್ಲದಿದ್ದರೆ ಸಮಸ್ಯೆ ಮರುಕಳಿಸಿ ದೊಡ್ಡ ಮಟ್ಟದ ದುರಂತಕ್ಕೆ ಕಾರಣವಾಗಲಿದೆ ಎಂದರು.

ಕಾಂತರಾಜು ವರದಿ: ಹಿಂದುಳಿದ ವರ್ಗಗಳ ಮೀಸಲಾತಿ ಕುರಿತ ಕಾಂತರಾಜು ವರದಿ ಇನ್ನೂ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ. ಸಲ್ಲಿಸಿದ ಬಳಿಕ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ವರದಿ ಸಲ್ಲಿಕೆಯಾಗ ಬೇಕಿತ್ತು. ಆದರೆ ಆಗಿಲ್ಲ. ಆಯೋಗ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಬಳಿಕವೇ ಮುಂದಿನ ಕ್ರಮ ಎಂದರು.

ಉಡುಪಿಯಲ್ಲಿ ಇತ್ತೀಚೆಗೆ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ನಡೆದ ವಿಡಿಯೋ ಪ್ರಕರಣದಲ್ಲಿ ಪೊಲೀಸರು ಸುವೊಮೊಟೊ ಕೇಸು ದಾಖಲಿಸಿ ತನಿಖೆ ನಡೆಸಿದ್ದಾರೆ. ಡಿವೈಎಸ್ಪಿ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ, ವರದಿ ಬರಲಿ ನೋಡೋಣ ಎಂದರು.

ತಾವೇ ಉದ್ಘಾಟಿಸಿದ ಡಾ.ಬಿ.ಆರ್.ಶೆಟ್ಟಿ ತಾಯಿ ಮಕ್ಕಳ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಐದು ತಿಂಗಳಿನಿಂದ ಸಂಬಳವಾಗದ ಬಗ್ಗೆ ಅವರ ಗಮನ ಸೆಳೆದಾಗ, ಆಸ್ಪತ್ರೆ ಈಗ ಸರಕಾರದ ಸುಪರ್ದಿಗೆ ಬಂದಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ನನಗೆ ಗೊತ್ತಿರಲಿಲ್ಲ. ಹಣಕಾಸು ಇಲಾಖೆಯೊಂದಿಗೆ ಈ ಬಗ್ಗೆ ಚರ್ಚಿಸಿ ಕ್ರಮಕ್ಕೆ ಸೂಚಿಸುತ್ತೇನೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಅವರ ಟೀಕೆಯ ಕುರಿತು ಪ್ರಶ್ನಿಸಿದಾಗ, ಅವರಿಗೆ ತಾನೇನು ಮಾತನಾಡುತ್ತೇನೆಂಬುದೇ ಗೊತ್ತಿರುವುದಿಲ್ಲ. ಹೀಗಾಗಿ ಆತನ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದರು.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್, ಬಂದರು ಮತ್ತು ಮೀನುಗಾರಿಕಾ ಸಚಿವ ಮಾಂಕಾಳು ವೈದ್ಯ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾದಿಕಾರಿ ಡಾ.ವಿಜಯಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೇಂದ್ರ ಮುಂತಾದವರು ಉಪಸ್ಥಿತರಿದ್ದರು. 



Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News