ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ 14 ದಿನ ನ್ಯಾಯಾಂಗ ಬಂಧನ

Update: 2023-11-22 08:51 GMT

ಉಡುಪಿ, ನ.22: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಉಡುಪಿ ಪೊಲೀಸರು ಇಂದು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಬಂಧಿತ ಆರೋಪಿ ಪ್ರವೀಣ್ ನನ್ನು ನ.15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು, ಗಂಭೀರ ಪ್ರಕರಣದ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ 14 ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದುಕೊಂಡಿದ್ದರು. ಈ ವೇಳೆ ಆರೋಪಿಯನ್ನು ನ.28ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಪ್ರವೀಣ್ ನನ್ನು ಕಸ್ಟಡಿಗೆ ಪಡೆದಿದ್ದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ತನಿಖೆ, ಮಹಜರು, ಹೇಳಿಕೆ, ಆರೋಪಿ ಗುರುತು ಸೇರಿದಂತೆ ಎಲ್ಲ ರೀತಿಯ ತನಿಖೆ ಪ್ರಕ್ರಿಯೆಯನ್ನು ವಾರದೊಳಗೆ ಪೂರ್ಣಗೊಳಿಸಿದ್ದಾರೆ.

ಇದೀಗ ಆರೋಪಿಯನ್ನು ನ.28ರವರೆಗೆ ಕಸ್ಟಡಿಯಲ್ಲಿ ಇಟ್ಟುಕೊಳ್ಳುವ ಅಗತ್ಯ ಇಲ್ಲ ಎಂಬುದನ್ನು ಮನಗಂಡ ಪೊಲೀಸರು, ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಆರೋಪಿಯನ್ನು ಪ್ರಕರಣದ ತನಿಖಾಧಿಕಾರಿ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಮುಂದೆ ಹಾಜರುಪಡಿಸಲಾಯಿತು.

ನ್ಯಾಯಾಧೀಶೆ ದೀಪಾ ಅವರು ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದರು. ಡಿ.5ರಂದು ಮತ್ತೆ ಆರೋಪಿಯನ್ನು ನ್ಯಾಯಕ್ಕೆ ಹಾಜರುಪಡಿಸುವಂತೆ ನ್ಯಾಯಾಧೀಶರು ಆದೇಶಿಸಿದರು. ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್.ಎಂ.ನದಾಫ್ ಹಾಜರಿದ್ದರು.

ಬಳಿಕ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕೊಂಡೊಯ್ಯಲಾಯಿತು. 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News