ಮಿಷನ್ ಇಂದ್ರಧನುಷ್ ಲಸಿಕೆಯಲ್ಲಿ ಶೇ.100 ಪ್ರಗತಿ ಸಾಧಿಸಿ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ ಸೂಚನೆ

Update: 2023-09-06 14:31 GMT

ಉಡುಪಿ, ಸೆ.6: ಜಿಲ್ಲೆಯಲ್ಲಿ ಎರಡನೇ ಸುತ್ತಿನ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮವನ್ನು ಸೆಪ್ಟಂಬರ್ 11ರಿಂದ 16 ರವರೆಗೆ ಆಯೋಜಿಸಲಾಗುತ್ತಿದ್ದು, ಲಸಿಕಾಕರಣದಲ್ಲಿ ಪ್ರತಿಶತ ನೂರರಷ್ಟು ಪ್ರಗತಿ ಸಾಧಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎರಡನೇ ಸುತ್ತಿನ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮ ಕುರಿತ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಲಸಿಕೆ ವಂಚಿತ ಗರ್ಭಿಣಿಯರು ಹಾಗೂ 0-5 ವರ್ಷ ದೊಳಗಿನ ಮಕ್ಕಳಿಗೆ ಆರೋಗ್ಯ ಇಲಾಖೆಯ ಮಾರ್ಗ ಸೂಚಿಯಂತೆ ಅಗತ್ಯ ಲಸಿಕೆಗಳನ್ನು ನೀಡುವುದರಿಂದ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯವಿದೆ ಎಂದರು.

ಲಸಿಕಾ ಅಭಿಯಾನಕ್ಕೆ ಸಂಬಂಧಿಸಿದಂತೆ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇತರೆ ಇಲಾಖೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ಲಸಿಕೆಯ ಕುರಿತು ವ್ಯಾಪಕ ಪ್ರಚಾರ ಕೈಗೊಂಡು, ಸಾರ್ವಜನಿಕರಿಗೆ ಇಂದ್ರ ಧನುಷ್ ಕಾರ್ಯಕ್ರಮದ ಕುರಿತು ಅರಿವು ಮೂಡಿಸಲು ಶಾಲೆಗಳಲ್ಲಿ ಜಾಥಾವನ್ನು ಏರ್ಪಡಿಸಿ, 0-5 ವರ್ಷದೊಳಗಿನ ಲಸಿಕೆ ವಂಚಿತ ಮಕ್ಕಳು ಹಾಗೂ ಗರ್ಭಿಣಿಯರು ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಬೇಕು ಎಂದರು.

ಲಸಿಕೆಗೆ ಬಾಕಿ ಇರುವ, ಲಸಿಕೆ ಬಿಟ್ಟು ಹೋಗಿರುವ, ಲಸಿಕೆ ವಂಚಿತ 0-5 ವರ್ಷದೊಳಗಿನ ಮಕ್ಕಳಿಗೆ ಹಾಗೂ ಗರ್ಭಿಣಿ ಯರಿಗೆ ಲಸಿಕೆಯನ್ನು ನೀಡಿ, ಅವರಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಾಗೂ ವಿಶೇಷವಾಗಿ ದಡಾರ-ರೂಬೆಲ್ಲಾ ರೋಗ ನಿರೋಧಕತೆ ಶಕ್ತಿಯನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ. ಲಸಿಕಾ ಶಿಬಿರ ನಡೆಯುವ ದಿನಾಂಕ ಹಾಗೂ ಸ್ಥಳಗಳ ಕುರಿತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪೋಷಕರಿಗೆ ಸೂಕ್ತ ಮಾಹಿತಿ ನೀಡುವಂತೆ ಕ್ರಮ ವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

ಕಟ್ಟಡ ನಿರ್ಮಾಣ ಕಾರ್ಮಿಕರುಗಳು ವಾಸಿಸುವ ಪ್ರದೇಶಗಳಿಗೆ ಭೇಟಿ ನೀಡಿ, ಲಸಿಕೆ ವಂಚಿತ ಕಾರ್ಮಿಕರ ಮಕ್ಕಳು ಲಸಿಕೆ ಪಡೆಯುವಂತೆ ಸಮುದಾಯಕ್ಕೆ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮದ ಕುರಿತು ಅರಿವು ಮೂಡಿಸಿ, ಲಸಿಕೆ ಪಡೆ ಯಲು ಪ್ರೇರೇಪಿಸಬೇಕು ಎಂದರು.

ಎರಡನೇ ಸುತ್ತಿನ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮದ ಉದ್ಘಾಟನೆಯು ಸೆಪ್ಟಂಬರ್ 11ರಂದು ನಗರದ ಅಲಂಕಾರ್ ಟಾಕೀಸ್ ಬಳಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ ಎಂದು ಡಾ.ವಿದ್ಯಾಕುಮಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಎಂ.ಜಿ. ರಾಮ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ರಾಮ್‌ರಾವ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ ಕೆ., ಜಿಲ್ಲಾ ಮಟ್ಟದ ಅನುಷ್ಠಾನಾಧಿ ಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News