ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ: ಉಡುಪಿ ಜಿಲ್ಲಾಧಿಕಾರಿ ಸೂಚನೆ

Update: 2024-09-26 16:15 GMT

ಉಡುಪಿ, ಸೆ.26: ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮ ದಡಿಯಲ್ಲಿ ಜಿಲ್ಲೆಯಲ್ಲಿ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. 2024ನೇ ಸಾಲಿನಲ್ಲಿ ಈವರೆಗೆ ಒಟ್ಟು 9307 ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆಸ್ಪತ್ರೆಗಳಲ್ಲಿ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಲಸಿಕೆಗಳು ಲಭ್ಯವಿದ್ದು, ಎಲ್ಲ ಪ್ರಕರಣಗಳಿಗೂ ಲಸಿಕೆಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ಸಂತಾನ ನಿಯಂತ್ರಣ, ಅನುಷ್ಠಾನ ಮೇಲ್ವಿಚಾರಣೆ ಸಮಿತಿ ರಚನೆ ಮತ್ತು ಸ್ಥಳೀಯ ಮಟ್ಟದ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವ ಮೂಲಕ ರೇಬಿಸ್ ರೋಗ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದ ಅವರು ಜಿಲ್ಲೆಯಲ್ಲಿ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದರು.

ಜಿಲ್ಲೆಯಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆ ಅಡಿಯಲ್ಲಿ ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‌ನಲ್ಲಿ 3007 ನಾಯಿಗಳಿಗೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 447 ನಾಯಿಗಳು ಸೇರಿದಂತೆ ಒಟ್ಟಾರೆ 3454 ನಾಯಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದರು.

ಪ್ರಸ್ತುತ ಸಾಲಿನಲ್ಲಿ ಎಪ್ರಿಲ್‌ನಿಂದ ಈವರೆಗೆ ಪಟ್ಟಣ ಪಂಚಾಯತ್, ಪುರಸಭೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ 320, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 797 ಸೇರಿದಂತೆ ಒಟ್ಟು 1117 ನಾಯಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದರು.

ನಾಯಿ ಕಡಿತದ ಪ್ರಕರಣಗಳಿಗೆ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೊಗ್ಯ ಕೇಂದ್ರಗಳಲ್ಲಿ, ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಪೂರ್ಣ ಪ್ರಮಾಣದ ಲಸಿಕೆಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು.

ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ನಗರಸಭೆ ಪರಿಸರ ಅಭಿಯಂತರರಾದ ಸ್ನೇಹ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News